

ರಾಜ್ಯದ ವಿವಿಧೆಡೆ ಮಂಗಳವಾರ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ , ಮೈಸೂರು, ಚಾಮರಾಜನಗರ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗಂಟೆಗೆ 30 ಕಿ.ಮೀ ನಿಂದ 40 ಕಿ.ಮೀ.ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಗುಡುಗು ಸಹಿತ ಹಗುರ ಮಳೆಯಾಗಲಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳ ಕೆಲವೆಡೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು. ಗುಡುಗು ಸಹಿತ ಹಗುರ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಮೂರ್ನಾಲ್ಕು ದಿನ ಇದೇ ವಾತಾವರಣ ಇರಲಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದೂ ಇಲಾಖೆ ಮುನ್ಸೂಚನೆ ನೀಡಿದೆ.
