ಬೆಂಗಳೂರು-ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟಿಯ ಸುರಂಗ ಮಾರ್ಗ ನಿರ್ಮಾಣ, ಬೆಂಗಳೂರು ನಗರದ ಸಂಚಾರದಟ್ಟಣೆ ತಗ್ಗಿಸಲು ಸುರಂಗ ಮಾರ್ಗಗಳ ನಿರ್ಮಾಣ ಸೇರಿದಂತೆ ರಾಜ್ಯದ ವಿವಿಧ ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ತ್ವರಿತ ಮಂಜೂರಾತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದರು.

ದಿಲ್ಲಿಯಲ್ಲಿ ಬುಧವಾರ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾದ ಸಿಎಂ ನೇತೃತ್ವದಲ್ಲಿ ಸಚಿವರಾದ ಸತೀಶ ಜಾರಕಿಹೊಳಿ, ಡಾ| ಎಚ್‌.ಸಿ. ಮಹದೇವಪ್ಪ, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಶಾಸಕ ಎನ್‌.ಎಚ್‌. ಕೋನರೆಡ್ಡಿ, ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಮತ್ತಿತರರನ್ನು ಒಳಗೊಂಡ ನಿಯೋಗ, ರಾಜ್ಯದ ವಿವಿಧ ಯೋಜನೆಗಳಡಿ ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಭೂಸ್ವಾಧೀನ, ಅರಣ್ಯ ತೀರುವಳಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಿತು. ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಮಂಜೂರಾತಿ ನೀಡುವಂತೆ ಕೋರಿತು.

ಈ ಪೈಕಿ ಮುಖ್ಯವಾಗಿ ಬೆಂಗಳೂರು-ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ-75 ( ಹಳೆಯ ರಾ.ಹೆ 48)ರ ಶಿರಾಡಿ ಘಾಟ್‌ನ ಮಾರನಹಳ್ಳಿಯಿಂದ ಅಡ್ಡಹೊಳೆವರೆಗೆ ಸುರಂಗ ನಿರ್ಮಾಣ ಮಾಡುವ ಯೋಜನೆಗೆ ಮಂಜೂರಾತಿ ನೀಡಬೇಕು. ಇದರಿಂದ ದೇಶದ 7ನೇ ಅತಿದೊಡ್ಡ ಬಂದರು ಇರುವ ಮಂಗಳೂರು ಮತ್ತು ರಾಜ್ಯ ರಾಜಧಾನಿ ನಡುವೆ ಸಂಪರ್ಕ ಸುಧಾರಣೆ ಆಗುತ್ತದೆ. ಇದು ಆರ್ಥಿಕ ಬೆಳವಣಿಗೆಗೆ ಸಾಕಷ್ಟು ಅನುಕೂಲ ಆಗಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. ಇದಲ್ಲದೆ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತದ ರಸ್ತೆಗಳ ಅಭಿವೃದ್ಧಿ ಕುರಿತು ಚರ್ಚಿಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!