
ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ಹಿರಿಯ ಶಾಸಕ ನೈನಾರ್ ನಾಗೇಂದ್ರನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಇದರ ಬೆನ್ನಲ್ಲೇ ಎಐಎಡಿಎಂಕೆ ಜೊತೆ ಬಿಜೆಪಿಯು ಮೈತ್ರಿ ಘೋಷಣೆ ಮಾಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕೇಂದ್ರ ಸಚಿವ ಅಮಿತ್ ಶಾ, ಎಐಎಡಿಎಂಕೆ ಮತ್ತು ಬಿಜೆಪಿ ನಾಯಕರು ಮತ್ತು ಎಲ್ಲಾ NDA ಪಕ್ಷಗಳು ತಮಿಳುನಾಡಿನ ಮುಂಬರುವ (2026) ವಿಧಾನಸಭಾ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಲಿವೆ ಎಂದು ಘೋಷಣೆ ಮಾಡಿದರು.
ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಅವರಿಂದ ತೆರವಾದ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಗೆ ನೈನಾರ್ ಅವರು ನಾಮಪತ್ರ ಸಲ್ಲಿಸಿದ್ದರು. ಇಂದು ನಡೆದ ಚುನಾವಣೆಗೆ ಯಾರೋಬ್ಬರೂ ನಾಮಪತ್ರ ಸಲ್ಲಿಸಿರಲಿಲ್ಲ. ಹೀಗಾಗಿ ಅವರು ಅವಿರೋಧವಾಗಿ ಆಯ್ಕೊಗೊಂಡಿದ್ದಾರೆ.
ಇತ್ತೀಚೆಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಮತ್ತು ತಮಿಳುನಾಡು ವಿರೋಧ ಪಕ್ಷದ ನಾಯಕರೂ ಆಗಿರುವ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಅಮಿತ್ ಶಾ ಅವರನ್ನು ಭೇಟಿಯಾಗಿ, ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಬಗ್ಗೆ ಚರ್ಚಿಸಿದ್ದರು ಎಂಬ ಸುದ್ದಿ ಹರಿದಾಡಿತ್ತು. ಈ ಎಲ್ಲಾ ಊಹಾಪೋಹಗಳಿಗೆ ಇದೀಗ ತೆರಬಿದ್ದಿದ್ದು, ಮುಂದಿನ ಚುನಾವಣೆಯಲ್ಲಿ ಎನ್ಡಿಎ ಜೊತೆ ಕೈಜೋಡಿಸಿ ಡಿಎಂಕೆಗೆ ಹಣಿಯಲು ಬಿಜೆಪಿ ತಂತ್ರ ರೂಪಿಸಿರುವುದು ಬಹಿರಂಗವಾಗಿದೆ.









