ಮಂಗಳೂರು: ನಗರದ ಹೊರವಲಯದ ಕುಡುಪು ಸಮೀಪ ರವಿವಾರ ಸಂಜೆ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯನ್ನು ಬಂಧನ ಮಾಡಲಾಗಿದೆ

ಆರೋಪಿಗಳಾದ ಕುಡುಪು ಮತ್ತು ಸುತ್ತಮುತ್ತಲಿನ ಸಚಿನ್ ಟಿ., ದೇವದಾಸ್, ಮಂಜುನಾಥ್, ಸಾಯಿದೀಪ್, ನಿತೀಶ್ ಕಮಾರ್ ಯಾನೆ ಸಂತೋಷ್, ದೀಕ್ಷಿತ್ ಕುಮಾರ್, ಸಂದೀಪ್, ವಿವಿಯನ್ ಅಲ್ವಾರಿಸ್, ಶ್ರೀದತ್ತ, ರಾಹುಲ್, ಪ್ರದೀಪ್ ಕುಮಾರ್, ಮನೀಶ್ ಶೆಟ್ಟಿ, ಧನುಷ್, ದೀಕ್ಷಿತ್, ಕಿಶೋರ್ ಕುಮಾರ್ ಎಂಬವರನ್ನು ಬಂಧಿಸಲಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, 30 ಜನರ ಗುಂಪಿನಿಂದ ಹಲ್ಲೆಗೊಳಗಾಗಿ ಹತ್ಯೆಯಾಗಿರುವುದು ಖಚಿತವಾಗಿದೆ ಎಂದು ಹೇಳಿದರು. ಅದರಲ್ಲಿ 25ಕ್ಕೂ ಹೆಚ್ಚು ಆರೋಪಿಗಳ ಗುರುತು ಪತ್ತೆ ಮಾಡಿದ್ದು, 15 ಮಂದಿಯನ್ನು ಬಂಧಿಸಿ ವಿಚಾರಣೆ ಮಾಡಲಾಗುತ್ತಿದೆ. ಆರೋಪಿಗಳು ಹಲ್ಲೆಯ ಬಗ್ಗೆ ಒಪ್ಪಿಕೊಂಡಿದ್ದು, ಆ ಬಗ್ಗೆ ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದರು.

ಎ.27ರಂದು ಭಟ್ರ ಕಲ್ಲುರ್ಟಿ ದೈವಸ್ಥಾನದ ಬಳಿಯ ಮೈದಾನದಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯಾವಳಿಯ ಸಂದರ್ಭ ಅಪರಿಚಿತ ವ್ಯಕ್ತಿಗೆ ಯಾವುದೋ ಮಾತಿಗೆ ಸಂಬಂಧಿಸಿ ಸಚಿನ್ ಟಿ. ಎಂಬಾತ ಜಗಳಕ್ಕೆ ಮುಂದಾದಾಗ ಸಹಚರರು ಕೂಡಾ ಜತೆ ಸೇರಿ ಹಲ್ಲೆ ನಡೆಸಿದ್ದಾರೆ. ಆತ ಓಡಿಹೋಗಲು ಯತ್ನಿಸಿದಾಗ ಸುಮಾರು 30 ಮಂದಿ ಸೇರಿ ಹಲ್ಲೆ ನಡೆಸಿದ್ದಾರೆ.

ಗುಂಪು ಸೇರಿ ಕೈಯಿಂದ ಮತ್ತು ಕಟ್ಟಿಗೆಯಿಂದ ಹೊಡೆದು ಕಾಲಿನಿಂದ ತುಳಿದು ಹಲ್ಲೆ ನಡೆಸಿದ್ದರು. ಈ ಸಮಯ ಕೆಲವರು ತಡೆಯಲು ಯತ್ನಿಸಿದರೂ ನಿರಂತರ ಹಲ್ಲೆ ನಡೆಸಿದ ಕಾರಣ ಅಪರಿಚಿತ ವ್ಯಕ್ತಿ ಮೃತಪಟ್ಟಿರುವುದು ಕಂಡುಬಂದಿದೆ ಎಂದು ತಿಳಿಸಿದರು.

ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಪ್ರಾಥಮಿಕ ವರದಿ ಪ್ರಕಾರ ಮೃತರ ಬೆನ್ನು ಭಾಗದಲ್ಲಿ ಬಲವಾದ ಹೊಡೆತದ ಗಾಯಗಳ ಕಾರಣದಿಂದ ಉಂಟಾದ ರಕ್ತಸ್ರಾವ, ಶಾಕ್ ಮತ್ತು ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಮರಣ ಸಂಭವಿಸಿರುವುದು ಕಂಡು ಬಂದಿದೆ.

ದೀಪಕ್ ಕುಮಾರ್ ಎಂಬವರು 19 ಜನರು ಮತ್ತು ಇತರರ ವಿರುದ್ಧ ನೀಡಿದ ದೂರಿನ ಆಧಾರದಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 37/2025, ಕಲಂ 102 (2), 189 (2),191 (1), 191(3), 240 ಭಾರತೀಯ ನ್ಯಾಯ ಸಂಹಿತೆ 2023 (ಬಿಎನ್‌ಎಸ್ 2023) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಹತ್ಯೆಗೊಳಗಾದ ವ್ಯಕ್ತಿಯ ಗುರುತು ಇನ್ನು ಪತ್ತೆಯಾಗಿಲ್ಲ ಎಂದು ತಿಳಿಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!