ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಕಾಮಿಡಿ ಖಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ (33) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೇ 11 ರಂದು ಮಂಗಳೂರಿನಲ್ಲಿ ಸ್ನೇಹಿತರೊಬ್ಬರ ಮೆಹೆಂದಿ ಸಮಾರಂಭದಲ್ಲಿ ಭಾಗವಹಿಸಿದ್ದ ವೇಳೆ ರಾಕೇಶ್ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದರು.

ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ, ವೈದ್ಯರು ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.

ರಾಕೇಶ್ ಪೂಜಾರಿ ಅವರು ಕನ್ನಡ ಟಿವಿ ಸರಣಿ ಹಿಟ್ಲರ್ ಕಲ್ಯಾಣದಲ್ಲಿ ತಮ್ಮ ಪಾತ್ರದ ಮೂಲಕ ಪ್ರೇಕ್ಷಕರ ಮನಗೆದ್ದಿದ್ದರು. ಇದರ ಜೊತೆಗೆ, 2022ರಲ್ಲಿ ದೊಡ್ಡ ಮಟ್ಟದ ಯಶಸ್ಸು ಕಂಡ ಕಾಂತಾರ ಚಿತ್ರದ ಪ್ರೀಕ್ವೆಲ್ ಆಗಿರುವ ಕಾಂತಾರ: ಚಾಪ್ಟರ್ 1 ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದರು. ಈ ಚಿತ್ರವನ್ನು ರಿಷಭ್ ಶೆಟ್ಟಿ ನಿರ್ದೇಶಿಸುತ್ತಿದ್ದು, ಪ್ರಸ್ತುತ ನಿರ್ಮಾಣ ಹಂತದಲ್ಲಿದೆ.

ರಾಕೇಶ್ ಅವರ ಅಕಾಲಿಕ ಮರಣದ ಸುದ್ದಿ ಕನ್ನಡ ಚಿತ್ರರಂಗದಲ್ಲಿ ಆಘಾತವನ್ನುಂಟು ಮಾಡಿದೆ. ಕಾಂತಾರ ಚಿತ್ರದ ನಿರ್ದೇಶಕ ಹಾಗೂ ನಟ ರಿಷಭ್ ಶೆಟ್ಟಿ ತಮ್ಮ ಎಕ್ಸ್ ಖಾತೆಯಲ್ಲಿ ಭಾವುಕ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. “ನೀನು ನನ್ನ ಮನಸ್ಸಿನಲ್ಲಿ ಎಂದೆಂದಿಗೂ ಒಬ್ಬ ಅದ್ಭುತ ಕಲಾವಿದ. ಕಾಂತಾರ ಸಿನಿಮಾದಲ್ಲಿ ನಿನ್ನ ಪಾತ್ರ ಹಾಗು ಅದನ್ನು ನಿರ್ವಹಿಸುವಾಗ ನಿನ್ನ ಮುಖದ ನಗು ನನ್ನ ಕಣ್ಣಲ್ಲಿ ಎಂದೆಂದಿಗೂ ಶಾಶ್ವತ. ಕಲಾವಿದ ವರ್ಗಕ್ಕೆ ಇದೊಂದು ತುಂಬಲಾರದ ನಷ್ಟ .. ಮತ್ತೆ ಹುಟ್ಟಿ ಬಾ ಗೆಳೆಯ .. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ. ದೇವರು ಈ ಆಘಾತವನ್ನು ಸಹಿಸುವ ಶಕ್ತಿ ನಿನ್ನ ಕುಟುಂಬಕ್ಕೆ ಕೊಡಲಿ,” ಎಂದು ರಿಷಭ್ ಶೆಟ್ಟಿ ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!