ಸಿಎಂ ಸಿದ್ದರಾಮಯ್ಯ  ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ನಿಗದಿತ ಅವಧಿಯಲ್ಲಿ ಎತ್ತಿನಹೊಳೆ ಕಾಮಗಾರಿ ಮುಗಿಸಿ ಎಂದು ಸೂಚಿಸಿದರು.

ಎತ್ತಿನಹೊಳೆ ನೀರಾವರಿ ಯೋಜನೆಯಲ್ಲ, ಕುಡಿಯುವ ನೀರಿನ ಮತ್ತು ಕೆರೆ ತುಂಬಿಸುವ ಯೋಜನೆಯಾಗಿದೆ.

ಯೋಜನಾ ವ್ಯಾಪ್ತಿಯ ಎಲ್ಲಾ 7ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವುದು ಸರ್ಕಾರದ ಗುರಿ. ಎತ್ತಿನಹೊಳೆ ಯೋಜನೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದು ಸರ್ಕಾರದ ಆದ್ಯತೆ’ ಎಂದು ಸಿಎಂ ಹೇಳಿದ್ದಾರೆ.

‘ಯೋಜನಾ ವ್ಯಾಪ್ತಿಯ ಎಲ್ಲಾ ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರು ಕಾಮಗಾರಿ ಪೂರ್ಣಗೊಳಿಸಲು ಇರುವ ಎಲ್ಲಾ ತಾಂತ್ರಿಕ ಅಡಚಣೆಗಳನ್ನು ನಿವಾರಿಸಬೇಕು’ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದರು.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ 14.056 ಟಿಎಂಸಿ ಕುಡಿಯುವ ನೀರು, 9.953 ಟಿಎಂಸಿ ನೀರು ಕೆರೆಯನ್ನು ತುಂಬಿಸಲು ಡಿಪಿಆರ್‌ ಮಾಡಲಾಗಿದೆ. ಯೋಜನೆಗೆ 23,251.66 ಕೋಟಿಯಷ್ಟಯ ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇದುವರೆಗೆ 17,147 ಕೋಟಿ ವೆಚ್ಚವಾಗಿದೆ. ಒಂದನೇ ಹಂತದಲ್ಲಿ ನದಿ ಪಾತ್ರದ ಏತ ಕಾಮಗಾರಿಗಳಲ್ಲಿ 7 ಪ್ಯಾಕೇಜ್‌ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಹಂತ 2ರಲ್ಲಿ ಗುರುತ್ವ ಮುಖ್ಯ ಕಾಲುವೆ ಕಾಮಗಾರಿಗಳಲ್ಲಿ 33 ಪ್ಯಾಕೇಜ್‌ಗಳ ಪೈಕಿ 11 ಪ್ಯಾಕೇಜ್ ಪೂರ್ಣಗೊಳಿಸಲಾಗಿದೆ.

16 ಕಿಮೀ ವ್ಯಾಪ್ತಿಯ ಕಾಮಗಾರಿ ಪ್ರಾರಂಭಿಸಬೇಕಿದ್ದು, ಇದರಲ್ಲಿ 6 ಎಕರೆ ಅರಣ್ಯ ಪ್ರದೇಶ ಹಾಗೂ 10 ಕಿಮೀ ಭೂಸ್ವಾಧೀನ ಪ್ರಕ್ರಿಯೆ ಕೈಗೊಳ್ಳಬೇಕಾಗಿದೆ. ಯೋಜನೆಯನ್ನು 2027ರ ಮಾರ್ಚ್‌ ಒಳಗಾಗಿ ಪೂರ್ಣಗೊಳಿಸಲು ಕಾಲಾವಧಿ ನಿಗದಿಪಡಿಸಲಾಗಿದೆ.
ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಕೃಷ್ಣ ಭೈರೇಗೌಡ, ಡಾ.ಎಂ.ಸಿ.ಸುಧಾಕರ್, ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು

Leave a Reply

Your email address will not be published. Required fields are marked *

Join WhatsApp Group
error: Content is protected !!