
ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ.
ಆರ್‌ಸಿಬಿ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು.
ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪದಡಿ ರಾಜ್ಯ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ರವಾನೆ ಮಾಡಿತ್ತು.
ಇದೀಗ ರಾಜ್ಯ ಸರ್ಕಾರದ ವರದಿಯನ್ನು ಅಂಗೀಕರಿಸಿದ ಕೇಂದ್ರ ಡಿಪಿಎಆರ್‌ಗೆ ಮಾಹಿತಿ ರವಾನೆ ಮಾಡಿದೆ. ದಯಾನಂದ್, ವಿಕಾಸ್ ಕುಮಾರ್ ಹಾಗೂ ಶೇಖರ್ ಎಂಬ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿ ಆದೇಶ ಹೊರಡಿಸಿತ್ತು.
ಪ್ರಕರಣದ ಹಿನ್ನೆಲೆ: ಆರ್‌ಸಿಬಿ ವಿಜಯೋತ್ಸವ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ ಸುಮಾರು 11 ಮಂದಿ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಘಟನೆಯಲ್ಲಿ 45ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಘಟನೆ ನಡೆಯುತ್ತಿದ್ದಂತೆ ರಾಜ್ಯ ಸರ್ಕಾರದ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ಘಟನೆ ನಡೆಯಲು ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ವಿಪಕ್ಷಗಳು ಕೂಡ ಗಂಭೀರ ಆರೋಪ ಮಾಡಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿತ್ತು.






