
ಕಡಬ: ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಶ್ವೇತಾ (23) ಅವರು ಸೋಮವಾರ ಸಾವನ್ನಪ್ಪಿದ ದುಃಖದ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದಲ್ಲಿ ಸಂಭವಿಸಿದೆ.
ಮೃತ ಶ್ವೇತಾ ಅವರು ಇಡಾಳ ನಿವಾಸಿ ಕರಿಯಪ್ಪ ಯಾನೆ ಕೇಶವ ಗೌಡ ಅವರ ಪುತ್ರಿಯಾಗಿದ್ದು, ಪದವೀಧರೆಯಾಗಿದ್ದರು. ಕಳೆದ ಎರಡು ವರ್ಷಗಳಿಂದ ಅವರು ಕಿಡ್ನಿ ಸಂಬಂಧಿತ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಆರಂಭದಲ್ಲಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.
ಆ ಬಳಿಕ ಮಂಗಳೂರಿನ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಅವರ ಆರೋಗ್ಯದಲ್ಲಿ ಹೆಚ್ಚಿನ ಸುಧಾರಣೆ ಕಂಡುಬಂದಿರಲಿಲ್ಲ.
ಸೋಮವಾರ ಬೆಳಿಗ್ಗೆ ಉಸಿರಾಟದ ತೊಂದರೆ ಉಂಟಾದ ಹಿನ್ನೆಲೆಯಲ್ಲಿ ಅವರನ್ನು ಆಲಂಕಾರಿನ ಖಾಸಗಿ ಕ್ಲಿನಿಕ್‌ಗೆ ಕರೆದುಕೊಂಡು ಹೋಗಿ ನಂತರ ತುರ್ತು ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.
ಮೃತ ಶ್ವೇತಾ ತಮ್ಮ ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.






