
ಮಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತ ಬೀಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇದರಿಂದಾಗಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ಆಗಸ್ಟ್ 18ರಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಸರ್ಕಾರಿ-ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ಅಧಿಕಾರಿಗಳು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು –
ಮಕ್ಕಳನ್ನು ನದಿ, ಕೆರೆ, ತಗ್ಗು ಪ್ರದೇಶ ಮತ್ತು ಸಮುದ್ರತೀರಕ್ಕೆ ಕರೆದೊಯ್ಯಬಾರದು.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಪ್ರವಾಸಿಗರು ಹಾಗೂ ಸಾರ್ವಜನಿಕರು ಸಮುದ್ರ ತೀರ ಹಾಗೂ ನದಿತೀರ ಪ್ರದೇಶಗಳಿಗೆ ತೆರಳದಂತೆ ಮನವಿ ಮಾಡಲಾಗಿದೆ.
ತಾಲೂಕು ಮಟ್ಟದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರದಲ್ಲಿ ಹಾಜರಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಲು ಸೂಚನೆ ನೀಡಲಾಗಿದೆ.
ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರು 24×7 ಟೋಲ್‌ಫ್ರೀ ಸಂಖ್ಯೆ 1077 / 0824-2442590 ಗೆ ಸಂಪರ್ಕಿಸಬಹುದಾಗಿದೆ.







