ಉಪ್ಪಿನಂಗಡಿ: ಮಹಿಳೆಯೊಬ್ಬಳ ಕುತ್ತಿಗೆಯಿಂದ ಚಿನ್ನದ ಸರ ಕಸಿದ ಪ್ರಕರಣದಲ್ಲಿ ಉಪ್ಪಿನಂಗಡಿ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿ, ಒಟ್ಟು ರೂ.5.05 ಲಕ್ಷ ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ.

ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ-ಪಡುಬೆಟ್ಟು ಪ್ರದೇಶದಲ್ಲಿ, ಜೂನ್ 4, 2025 ರಂದು ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ಮಹಿಳೆಯೊಬ್ಬಳ ಕುತ್ತಿಗೆಯಿಂದ ಬಲವಂತವಾಗಿ ಚಿನ್ನದ ಸರ ಕಸಿದು ಪರಾರಿಯಾಗಿದ್ದರು. ಈ ಸಂಬಂಧ ಉಪ್ಪಿನಂಗಡಿ ಠಾಣೆಯಲ್ಲಿ ಅಕ್ರ.48/2025, ಕಲಂ 309(4)(ಬಿ) ಎನ್ ಎಸ್ ಅಡಿ ಪ್ರಕರಣ ದಾಖಲಾಗಿತ್ತು.

ತನಿಖೆಯ ಬಳಿಕ, ಪೊಲೀಸರು ಸುಳ್ಯ ತಾಲ್ಲೂಕು ಆಲೆಟ್ಟಿ ನಿವಾಸಿ ಅಬ್ದುಲ್ ರೆಹಮಾನ್ (31) ಎಂಬಾತನನ್ನು ನೆಕ್ಕಿಲಾಡಿ ಬಳಿ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

ಆರೋಪಿಯಿಂದ ರೂ.4,54,000 ಮೌಲ್ಯದ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ಪಲ್ಸರ್ ಬೈಕ್ ಸೇರಿ ಒಟ್ಟು ರೂ.5,05,000 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿದ ಬೈಕ್ ಮೈಸೂರು ನಗರದ ವಿಜಯನಗರ ಠಾಣೆ ವ್ಯಾಪ್ತಿಯ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದೆ ಎಂದು ತಿಳಿದುಬಂದಿದೆ.

ಈ ಪತ್ತೆ ಕಾರ್ಯಾಚರಣೆಯನ್ನು ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಅರುಣ್ ನಾಗೇಗೌಡರವರ ಮಾರ್ಗದರ್ಶನದಲ್ಲಿ, ಉಪ್ಪಿನಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರ ನೇತೃತ್ವದಲ್ಲಿ, ಠಾಣಾ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡ ಯಶಸ್ವಿಯಾಗಿ ನಡೆಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!