ಮಂಗಳೂರು: ಪುತ್ತೂರು ತಾಲೂಕು ಕಚೇರಿಯ ತಹಶೀಲ್ದಾರ್ ಶ್ರೀ ಎಸ್.ಬಿ. ಕೂಡಲಗಿ ವಿರುದ್ಧ ದಾಖಲಾಗಿರುವ ಭ್ರಷ್ಟಾಚಾರ ಪ್ರಕರಣದಲ್ಲಿ, ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯವು ಜಾಮೀನು ಅರ್ಜಿಯನ್ನು ಗುರುವಾರ (ಸೆ. 25) ರಂದು ನಿರಾಕರಿಸಿದೆ.

ಪ್ರಕರಣದ ಹಿನ್ನೆಲೆ:
ಒಬ್ಬ ಪಿರ್ಯಾದಿದಾರರ ಜಮೀನಿನ ನಿರಾಕ್ಷೇಪಣಾ ಪತ್ರಕ್ಕೆ ಸಂಬಂಧಿಸಿದಂತೆ, ದಿನಾಂಕ 28.08.2025 ರಂದು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 09/2025ರಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಪ್ರಥಮ ದರ್ಜೆ ಸಹಾಯಕ ಶ್ರೀ ಸುನಿಲ್ ಕುಮಾರ್ ಎಸ್.ಎಮ್ ಹಾಗೂ ತಹಶೀಲ್ದಾರ್ ಶ್ರೀ ಎಸ್.ಬಿ. ಕೂಡಲಗಿ ವಿರುದ್ಧ ಭ್ರಷ್ಟಾಚಾರ ನಿರ್ಬಂಧಕ ಕಾಯ್ದೆ, 1988 (ತಿದ್ದುಪಡಿ ಕಾಯ್ದೆ 2018) ಅಡಿಯಲ್ಲಿ ಆರೋಪಗಳು ಹೊರಿಸಲ್ಪಟ್ಟಿವೆ.

ಟ್ರ್ಯಾಪ್ ಕಾರ್ಯಾಚರಣೆಯ ವೇಳೆ, ಪ್ರಥಮ ದರ್ಜೆ ಸಹಾಯಕ ಸುನಿಲ್ ಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಬಳಿಕ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಆದರೆ, ತಹಶೀಲ್ದಾರ್ ಕೂಡಲಗಿ ತಲೆಮರೆಸಿಕೊಂಡಿದ್ದರು.

ಇದಾದ ಬಳಿಕ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರೂ, ಮಾನ್ಯ ನ್ಯಾಯಾಧೀಶೆ ಸುನೀತಾ ಎಸ್.ಜಿ ಅವರು ಆರೋಪದ ಗಂಭೀರತೆಯನ್ನು ಪರಿಗಣಿಸಿ ಜಾಮೀನು ನಿರಾಕರಿಸಿದ್ದಾರೆ.

ಈ ಪ್ರಕರಣದಲ್ಲಿ ಲೋಕಾಯುಕ್ತ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ರವೀಂದ್ರ ಮುನ್ನಿಪ್ಪಾಡಿ ವಾದ ನಡೆಸಿದರು.

ಈ ವಿಷಯವನ್ನು ಕರ್ನಾಟಕ ಲೋಕಾಯುಕ್ತ, ಮಂಗಳೂರು ಪೊಲೀಸ್ ಅಧೀಕ್ಷಕ ಶ್ರೀ ಕುಮಾರ ಚಂದ್ರ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!