
ಪುತ್ತೂರು, ಅ.13:ಗಾಂಧಿ ಜಯಂತಿ ಸಂಭ್ರಮಾಚರಣೆಯ ಅಂಗವಾಗಿ ದುಶ್ಚಟಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ. ಟ್ರಸ್ಟ್) ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಗಾಂಧಿಸ್ಮೃತಿ ಮತ್ತು ಬೃಹತ್ ಜನಜಾಗೃತಿ ಸಮಾವೇಶ ಅಕ್ಟೋಬರ್ 15ರಂದು ಬೆಳಿಗ್ಗೆ 10.30ಕ್ಕೆ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಪದ್ಮನಾಭ ಶೆಟ್ಟಿ ತಿಳಿಸಿದ್ದಾರೆ.
ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ಗಾಂಧಿ ಜಯಂತಿ ಸಂಭ್ರಮವನ್ನು ವೇದಿಕೆ ವಿಶಿಷ್ಟ ಹಾಗೂ ವಿಭಿನ್ನ ರೀತಿಯಲ್ಲಿ ಆಚರಿಸುತ್ತಿದೆ ಎಂದರು. ಮಾದಕ ವಸ್ತುಗಳ ತಡೆಗಟ್ಟುವಿಕೆ ಹಾಗೂ ದುಶ್ಚಟಗಳ ನಿವಾರಣೆಗೆ ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಗ್ರಾಮಾಭಿವೃದ್ಧಿ ಯೋಜನೆಯಡಿ ಪ್ರತಿ ತಾಲೂಕಿಗೆ ರೂ.1.25 ಲಕ್ಷ ಅನುದಾನ ನೀಡಲಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ 149 ಮದ್ಯವರ್ಜನ ಶಿಬಿರಗಳನ್ನು ಆಯೋಜಿಸಿ 10,871 ಮಂದಿ ವ್ಯಸನಮುಕ್ತರಾಗಿದ್ದಾರೆ. ಜೊತೆಗೆ 52 ಶಾಲೆಗಳಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳು ನಡೆಯುತ್ತಿವೆ ಎಂದರು.
ಕಾರ್ಯಕ್ರಮದ ದಿನ ಬೆಳಿಗ್ಗೆ ಮುಖ್ಯರಸ್ತೆಯಿಂದ ಪೂರ್ಣಕುಂಭ ಮೆರವಣಿಗೆ ನಡೆಯಲಿದ್ದು, ನಂತರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇದಿಕೆಯ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ ವಹಿಸಲಿದ್ದು, ಆಶಯ ಭಾಷಣವನ್ನು ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ವೇದಿಕೆಯ ರಾಜ್ಯ ಸಂಘಟನಾಧ್ಯಕ್ಷ ನಟರಾಜ ಬಾದಾಮಿ, ಮನೋತಜ್ಞ ಡಾ. ಶ್ರೀನಿವಾಸ್ ಭಟ್, ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ವೇದಿಕೆಯ ಸ್ಥಾಪಕಾಧ್ಯಕ್ಷ ವಸಂತ್ ಸಾಲಿಯಾನ್, ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಉದ್ಯಮಿ ಆರ್. ಬಿ. ಹೆಬ್ಬಳ್ಳಿ ಮತ್ತಿತರರು ಉಪಸ್ಥಿತರಿರಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಕಾರ್ಯದರ್ಶಿ ಬಾಬು ನಾಯ್ಕ, ಜಿಲ್ಲಾ ಮಾಜಿ ಅಧ್ಯಕ್ಷ ಸಾಜ್ ರಾಧಾಕೃಷ್ಣ ಆಳ್ವ, ಕಡಬ ತಾಲೂಕು ಅಧ್ಯಕ್ಷ ಮಹೇಶ್ ಕೆ. ಸವಣೂರು, ಪುತ್ತೂರು ತಾಲೂಕು ಅಧ್ಯಕ್ಷ ಲೋಕೇಶ್ ಹೆಗ್ಡೆ ಉಪಸ್ಥಿತರಿದ್ದರು.









