
ಮಾಣಿ: ಮಾಣಿ–ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಸಮೀಪ ಗಡಿಸ್ಥಳ ಎಂಬಲ್ಲಿ ಮಾರುತಿ ಓಮ್ಮಿ ವ್ಯಾನ್ ಪಲ್ಟಿಯಾಗಿ ಹೆದ್ದಾರಿ ಬದಿಯ ಹೊಂಡಕ್ಕೆ ಬಿದ್ದ ಘಟನೆ ನಡೆದಿದೆ.
ಮಂಗಳೂರಿನಿಂದ ಕುಶಾಲನಗರದತ್ತ ತೆರಳುತ್ತಿದ್ದ ಕುಟುಂಬವೊಂದು ಪ್ರಯಾಣಿಸುತ್ತಿದ್ದ ಮಾರುತಿ ವ್ಯಾನ್ ತಾಂತ್ರಿಕ ವೈಫಲ್ಯದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದಿದೆ ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆಗೆ ವ್ಯಾನ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಚಾಲಕ ವಾಹನದೊಳಗೆ ಸಿಲುಕಿಕೊಂಡಿದ್ದಾನೆ. ಸ್ಥಳೀಯರಾದ ವಿಕ್ಕಿ ಶೆಟ್ಟಿ ಮಾಣಿ ಹಾಗೂ ತಂಡದವರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಚಾಲಕನನ್ನು ಸುರಕ್ಷಿತವಾಗಿ ಹೊರತೆಗೆದು ಆಸ್ಪತ್ರೆಗೆ ರವಾನಿಸುವಲ್ಲಿ ಸಹಕರಿಸಿದ್ದಾರೆ.
ಅಪಘಾತದಲ್ಲಿ ಚಾಲಕ ಸೇರಿದಂತೆ ಐವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






