
ಪುತ್ತೂರು, ನ.10 : ಎತ್ತಿನಹೊಳೆ ಯೋಜನೆಯ ನೀರನ್ನು ಬೆಂಗಳೂರಿನ ಕೈಗಾರಿಕೆಗಳಿಗೆ ಬಳಸುವ ರಾಜ್ಯ ಸರಕಾರದ ಪ್ರಸ್ತಾವನೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ರೈ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಈಗಾಗಲೇ ಕುಡಿಯುವ ನೀರಿನ ಗಂಭೀರ ಸಮಸ್ಯೆ ಎದುರಿಸುತ್ತಿದ್ದು, ಫೆಬ್ರವರಿ ಮತ್ತು ಮಾರ್ಚ್ ತಿಂಗಳುಗಳಲ್ಲೇ ನೀರಿನ ತೀವ್ರ ಅಭಾವ ಉಂಟಾಗುತ್ತದೆ. ಅಂತರ್ಜಲ ಮಟ್ಟ ಸಂಪೂರ್ಣ ಕುಸಿದಿದ್ದು, ಕೃಷಿಗೆ ಬೋರ್‌ವೆಲ್‌ಗಳಿಂದಲೂ ನೀರು ಸಿಗದಂತಹ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ಬೆಂಗಳೂರಿನ ಕೈಗಾರಿಕೆಗಳಿಗೆ ನೀರು ಪೂರೈಸುವುದು ಎಷ್ಟರ ಮಟ್ಟಿಗೆ ಸರಿ? ಎಂದು ಅವರು ಪ್ರಶ್ನಿಸಿದರು.
“ಜಿಲ್ಲೆಯ ಜನತೆಗೆ ನೀರು ಸಿಗದ ಸ್ಥಿತಿ ನಿರ್ಮಾಣವಾಗಿರುವಾಗ ಕೈಗಾರಿಕೆಗಳಿಗೆ ನೀರು ಸರಬರಾಜು ಮಾಡುವ ನಿರ್ಧಾರಕ್ಕೆ ನನ್ನ ಪೂರ್ಣ ವಿರೋಧವಿದೆ” ಎಂದು ಶಾಸಕ ಅಶೋಕ್ ರೈ ಸ್ಪಷ್ಟಪಡಿಸಿದರು.
ಎತ್ತಿನಹೊಳೆ ನೀರನ್ನು ಕೈಗಾರಿಕೆಗಳಿಗೆ ಪೂರೈಸುವ ನಿರ್ಧಾರ ಕೈಗೊಳ್ಳುವ ಮುನ್ನ, ಪಶ್ಚಿಮವಾಹಿನಿ ಯೋಜನೆಗೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು. ಜಿಲ್ಲೆಯ ನದಿಗಳಿಗೆ ಅಣೆಕಟ್ಟು ನಿರ್ಮಿಸಿ ನೀರು ಸಂಗ್ರಹಿಸುವ ಯೋಜನೆಗಳಿಗೆ ಆದ್ಯತೆ ನೀಡಿ, ಜಿಲ್ಲೆಗೆ ಕುಡಿಯುವ ನೀರಿನ ಭದ್ರತೆ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದರು.
“ಸರಕಾರ ಎತ್ತಿನಹೊಳೆ ಯೋಜನೆಗೆ ಎಷ್ಟು ಅನುದಾನ ನೀಡುತ್ತಿದೆಯೋ ಅಷ್ಟೇ ಅನುದಾನವನ್ನು ಪಶ್ಚಿಮವಾಹಿನಿ ಯೋಜನೆಗೂ ನೀಡಬೇಕು. ನಮಗೆ ಮುಖ್ಯವಾಗಿ ಬೇಕಿರುವುದು ಕುಡಿಯುವ ನೀರು” ಎಂದು ಅವರು ತಿಳಿಸಿದರು.
ಜಿಲ್ಲೆಯ ಅಗತ್ಯತೆಗಳನ್ನು ಪರಿಗಣಿಸದೆ ಕೈಗಾರಿಕೆಗಳಿಗೆ ನೀರು ಒದಗಿಸಲು ಮುಂದಾದರೆ, ಮುಂದಿನ ದಿನಗಳಲ್ಲಿ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತಪಡಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ದಕ್ಷಿಣ ಕನ್ನಡದ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ತನಕ ಜನರ ಪರವಾಗಿ ಹೋರಾಡುತ್ತೇನೆ ಎಂದು ಶಾಸಕ ಅಶೋಕ್ ರೈ ಹೇಳಿದರು.






