
ಮಂಗಳೂರು | ಇತ್ತೀಚೆಗೆ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ನಡೆದ ಘಟನೆಯ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಜಿಲ್ಲೆಯಾದ್ಯಂತ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮಗಳನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ, ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲೂ ರಾತ್ರಿ ವೇಳೆಯಲ್ಲಿ ಕಟ್ಟುನಿಟ್ಟಿನ ಪೊಲೀಸ್ ಗಸ್ತು ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸೂಕ್ಷ್ಮ ಹಾಗೂ ಜನಸಂದಣಿ ಪ್ರದೇಶಗಳಲ್ಲಿ picketing point ಗಳನ್ನು ತೆರೆಯಲಾಗಿದ್ದು, ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳ ನಿಯೋಜನೆಯೊಂದಿಗೆ ನಿಗಾ ವಹಿಸಲಾಗುತ್ತಿದೆ.
ಇದಲ್ಲದೇ, ಜಿಲ್ಲೆಗೆ ಪ್ರವೇಶಿಸುವ ಪ್ರಮುಖ ಮಾರ್ಗಗಳು ಹಾಗೂ ಪ್ರಮುಖ ಜಂಕ್ಷನ್‌ಗಳಲ್ಲಿ ನಾಕಾಬಂದಿ ಅಳವಡಿಸಿ, ವಾಹನ ಹಾಗೂ ವ್ಯಕ್ತಿಗಳ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ಜಿಲ್ಲೆಯ ಪ್ರವಾಸಿ ತಾಣಗಳು, ಧಾರ್ಮಿಕ ಕೇಂದ್ರಗಳು, ಸರ್ಕಾರಿ ಕಟ್ಟಡಗಳು ಹಾಗೂ ಜನಸಂದಣಿ ಹೆಚ್ಚಾಗಿರುವ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದ್ದು, 24×7 ಪೊಲೀಸ್ ಕಣ್ಗಾವಲು ಜಾರಿಯಲ್ಲಿದೆ.
ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರಿಗೂ ಎಚ್ಚರಿಕೆ ನೀಡಿದ್ದು, ಸಂಶಯಾಸ್ಪದ ವ್ಯಕ್ತಿಗಳು, ಸಂಶಯಾಸ್ಪದ ವಸ್ತುಗಳು ಅಥವಾ ಯಾವುದಾದರೂ ಅಸಮಾನ್ಯ ಚಟುವಟಿಕೆಗಳು ಕಂಡುಬಂದಲ್ಲಿ ಕೂಡಲೇ ಜಿಲ್ಲಾ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡುವಂತೆ ವಿನಂತಿಸಿದೆ.
“ಸಾರ್ವಜನಿಕರ ಸುರಕ್ಷತೆ ನಮ್ಮ ಆದ್ಯತೆ. ಜಿಲ್ಲೆಯಲ್ಲಿನ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಸಂಪೂರ್ಣವಾಗಿ ಸನ್ನದ್ಧರಾಗಿದ್ದಾರೆ. ಸಾರ್ವಜನಿಕರು ಕೂಡ ಸಹಕರಿಸಬೇಕು,” ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.






