
ಪುತ್ತೂರು: ನಗರಸಭಾ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು ಹಾಗೂ ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು ತಮ್ಮ ಸಂಸ್ಥೆಗಳ ಆವರಣದಲ್ಲಿ ವಾಸಿಸುತ್ತಿರುವ ಬೀದಿ ನಾಯಿಗಳ ಸಂಖ್ಯೆಯನ್ನು ಲೆಕ್ಕಿಸಿ ನಗರಸಭೆಗೆ ವರದಿ ಸಲ್ಲಿಸಬೇಕು ಎಂದು ನಗರಸಭೆ ಪ್ರಕಟಣೆಯಲ್ಲಿ ತಿಳಿಸಿದೆ.
ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿರುವ ರಿಟ್ ಅರ್ಜಿ ಸಂಖ್ಯೆ 5/2025ರಲ್ಲಿ ನೀಡಿದ ನಿರ್ದೇಶನದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಬೀದಿ ನಾಯಿಗಳ ಉಪಟಳ ತಡೆದು, ಅವುಗಳ ಪ್ರವೇಶವನ್ನು ನಿಯಂತ್ರಿಸಲು ಸಂಬಂಧಪಟ್ಟ ಸಂಸ್ಥೆಗಳು ಸಹಕರಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ಮುಂದಿನ ದಿನಗಳಲ್ಲಿ ಬೀದಿ ನಾಯಿಗಳನ್ನು ಸ್ಥಳಾಂತರಿಸುವ ಕಾರ್ಯಾಚರಣೆಗೆ ಸಹಕರಿಸುವುದರೊಂದಿಗೆ, ಅವುಗಳ ಪ್ರವೇಶ ನಿರ್ಬಂಧದ ಮೇಲ್ವಿಚಾರಣೆಗೆ ಪ್ರತಿ ಸಂಸ್ಥೆಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿ, ಸಂಬಂಧಪಟ್ಟ ಮಾಹಿತಿಯೊಂದಿಗೆ ನಗರಸಭಾ ಕಾರ್ಯಾಲಯಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿದೆ.
ಸಂಸ್ಥೆಗಳ ಆವರಣದೊಳಗೆ ಬೀದಿ ನಾಯಿಗಳ ಪ್ರವೇಶ ತಡೆಯಲು ವೈಜ್ಞಾನಿಕವಾಗಿ ತ್ಯಾಜ್ಯ ಸಂಗ್ರಹಣೆ, ಸಂಗ್ರಹ ಮತ್ತು ವಿಲೇವಾರಿಗೆ ಸೂಕ್ತ ವ್ಯವಸ್ಥೆ ಮಾಡುವುದು ಕಡ್ಡಾಯವಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ, ಪುನಃ ನಾಯಿಗಳು ವಾಸ ಮಾಡಲು ಅವಕಾಶ ನೀಡಿದಲ್ಲಿ ಅವುಗಳನ್ನು ಸ್ಥಳಾಂತರಿಸುವ ವೆಚ್ಚವನ್ನು ಸಂಬಂಧಪಟ್ಟ ಸಂಸ್ಥೆಗಳಿಂದಲೇ ವಸೂಲಿ ಮಾಡಲಾಗುವುದು ಎಂದು ತಿಳಿಸಲಾಗಿದೆ.
ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಮಾಡಿದಲ್ಲಿ ಸಂಬಂಧಪಟ್ಟ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.






