ಪುತ್ತೂರು: ಕಬಕ ಗ್ರಾಮದ ನೆಹರುನಗರದಲ್ಲಿ ನಿಲ್ಲಿಸಿದ್ದ ಲಾರಿಯಿಂದ ಲಕ್ಷಾಂತರ ರೂ. ಮೌಲ್ಯದ ಕಾಫಿ ಬೀಜಗಳನ್ನು ಕಳವು ಮಾಡಿದ್ದ ಪ್ರಕರಣದಲ್ಲಿ ಓರ್ವ ಆರೋಪಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೆರ್ನಾಜೆಯ ಆಶ್ಲೇಷ ಭಟ್, ರಿಕ್ಷಾ ಚಾಲಕರಾದ ನಾರಾಯಣ್ ಶೆಟ್ಟಿಗಾರ್, ಮಿಥುನ್ ಕುಮಾರ್, ಬನ್ನೂರಿನ ವಿಜಯ ಶೆಟ್ಟಿ ಹಾಗೂ ಸಹಾಯಕ ಸುಳ್ಯದ ಆಶ್ರಫ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಈ ವೇಳೆ ಕಳವು ಮಾಡಲಾಗಿದ್ದ ತಲಾ 60 ಕೆಜಿ ತೂಕದ 80 ಚೀಲ ಕಾಫಿ ಬೀಜಗಳು, ಕೃತ್ಯಕ್ಕೆ ಬಳಸಿದ ಗೂಡ್ಸ್ ಟೆಂಪೊ ಹಾಗೂ ಎರಡು ಆಟೋ ರಿಕ್ಷಾಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಬಳಿಕ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿ ಆರೋಪಿಗಳನ್ನು ಬಿಡುಗಡೆಗೊಳಿಸಲಾಗಿತ್ತು.

ಈ ಪ್ರಕರಣದ ಆರೋಪಿ ಆಶ್ರಫ್ ಅವರಿಗೆ ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿ ಪರ ವಕೀಲರಾದ ಉದಯಶಂಕರ ಶೆಟ್ಟಿ ಅರಿಯಡ್ಕ, ಶ್ರೀಮತಿ ಕೃಷ್ಣವೇಣಿ ಎಂ. ಮತ್ತು ರಾಕೇಶ್ ಮಸ್ಕರೇನಸ್ ವಾದ ಮಂಡಿಸಿದ್ದರು.

ಆರೋಪಿಗಳ ವಿರುದ್ಧ ಬಿಎನ್‌ಎಸ್ ಕಾಯ್ದೆಯ ಕಲಂ 303(2) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಬಿಎನ್‌ಎಸ್ ಕಾಯ್ದೆಯ ಪ್ರಕಾರ ಏಳು ವರ್ಷಕ್ಕಿಂತ ಕಡಿಮೆ ಅವಧಿಯ ಶಿಕ್ಷೆ ವಿಧಿಸಬಹುದಾದ ಪ್ರಕರಣಗಳಲ್ಲಿ ಆರೋಪಿಗಳಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗುತ್ತದೆ. ನೋಟಿಸ್‌ಗೆ ಸ್ಪಂದಿಸದೆ ತಲೆಮರೆಸಿಕೊಂಡಲ್ಲಿ ಬಂಧನಕ್ಕೆ ಅವಕಾಶವಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!