
ಬೆಂಗಳೂರು:ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ್ದಕ್ಕೆ ಯುವತಿಯ ತಾಯಿ ಗೀತಾ ಅವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭೀಕರ ಘಟನೆ ಬಸವೇಶ್ವರನಗರದ ಭೋವಿ ಕಾಲೋನಿಯಲ್ಲಿ ನಡೆದಿದ್ದು, ತೀವ್ರವಾಗಿ ಗಾಯಗೊಂಡಿದ್ದ ಗೀತಾ ಅವರು ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.
ಗೀತಾ ಅವರು ಸ್ಥಳೀಯವಾಗಿ ಪ್ರಾವಿಷನ್ ಸ್ಟೋರ್ ನಡೆಸುತ್ತಿದ್ದು, ಅದೇ ಪ್ರದೇಶದಲ್ಲಿ ಟೀ ಸ್ಟಾಲ್ ಇಟ್ಟುಕೊಂಡಿದ್ದ ಮುತ್ತು ಎಂಬ ಯುವಕನೊಂದಿಗೆ ಪರಿಚಯ ಬೆಳೆಸಿಕೊಂಡಿದ್ದರು. ಪರಿಚಯದ ಬಳಿಕ ಗೀತಾ, ಅವರ 19 ವರ್ಷದ ಮಗಳು ಹಾಗೂ ಮುತ್ತು ಒಂದೇ ಮನೆಯಲ್ಲಿ ವಾಸವಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ನಡುವೆ ಯುವತಿಯನ್ನು ಮದುವೆ ಮಾಡಿಕೊಡುವಂತೆ ಮುತ್ತು ಗೀತಾ ಅವರ ಮೇಲೆ ನಿರಂತರ ಒತ್ತಡ ಹೇರುತ್ತಿದ್ದ ಎನ್ನಲಾಗಿದೆ. ಆದರೆ ಗೀತಾ ಅವರು ಇದಕ್ಕೆ ಸ್ಪಷ್ಟವಾಗಿ ನಿರಾಕರಿಸಿದ್ದಕ್ಕೆ ಕೋಪಗೊಂಡ ಮುತ್ತು, ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಯ ಬಳಿಕ ಆರೋಪಿ ಪರಾರಿಯಾಗಿದ್ದ.
ತೀವ್ರವಾಗಿ ಸುಟ್ಟ ಗಾಯಗಳೊಂದಿಗೆ ಗೀತಾ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶೇ.50ಕ್ಕಿಂತ ಹೆಚ್ಚು ಸುಟ್ಟಗಾಯಗಳಿಂದ ಬಳಲುತ್ತಿದ್ದ ಅವರು ಕಳೆದ 20 ದಿನಗಳ ಕಾಲ ಸಾವು–ಬದುಕಿನ ನಡುವೆ ಹೋರಾಟ ನಡೆಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.
ಈ ಸಂಬಂಧ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿ ಮುತ್ತುವನ್ನು ಬಂಧಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.






