
ಪುತ್ತೂರು: ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಪುತ್ತೂರು ತಾಲೂಕು ಅಕ್ರಮ–ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವಕ್ತಾರರನ್ನಾಗಿ ನೇಮಕ ಮಾಡಿ ಕೆಪಿಸಿಸಿ ಆದೇಶ ಹೊರಡಿಸಿದೆ. ಕೆಪಿಸಿಸಿ ರಾಜ್ಯ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ಈ ನೇಮಕಾತಿಯನ್ನು ಅಧಿಕೃತಗೊಳಿಸಿದ್ದಾರೆ.
ಮಹಮ್ಮದ್ ಬಡಗನ್ನೂರು ಅವರು ದಶಕಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿ ಸಂಘಟನಾ ಹಾಗೂ ಆಡಳಿತಾತ್ಮಕ ಅನುಭವ ಪಡೆದಿದ್ದಾರೆ. ಬಡಗನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷರಾಗಿ ಹಾಗೂ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದಾರೆ.
ಅಲ್ಲದೆ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ, ಪಡುಮಲೆ ಕೋಟಿ ಚೆನ್ನಯ್ಯ ಅಭಿವೃದ್ಧಿ ಸಮಿತಿ ಸದಸ್ಯರಾಗಿ ಮತ್ತು ಪಡುಮಲೆ ಜುಮಾ ಮಸೀದಿ ಅಧ್ಯಕ್ಷರಾಗಿ ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತರಬೇತುದಾರ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಪಕ್ಷ ಸಂಘಟನೆಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಈ ಹೊಸ ಜವಾಬ್ದಾರಿಯನ್ನು ನೀಡಲಾಗಿದೆ.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಶಿಫಾರಸಿನ ಮೇರೆಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರ ಸೂಚನೆಯಂತೆ ಈ ನೇಮಕಾತಿ ಮಾಡಲಾಗಿದೆ. ಬಡಗನ್ನೂರು ಅವರ ಸುದೀರ್ಘ ರಾಜಕೀಯ ಅನುಭವ ಮತ್ತು ಸಂವಹನ ಕೌಶಲ್ಯ ಜಿಲ್ಲಾ ಮಟ್ಟದಲ್ಲಿ ಪಕ್ಷದ ಧ್ವನಿಯನ್ನು ಇನ್ನಷ್ಟು ಬಲಪಡಿಸಲಿದೆ ಎಂದು ಪಕ್ಷ ವಲಯಗಳು ವಿಶ್ವಾಸ ವ್ಯಕ್ತಪಡಿಸಿವೆ.






