
ಪುತ್ತೂರು, ಜ.22: ಪುತ್ತೂರು ತಾಲ್ಲೂಕಿನ ಕಾವು ಮಾಡ್ನೂರು ಗ್ರಾಮದ ನಿವಾಸಿ ರವಿ ಎಂಬವರು ಬುಧವಾರ ಬೆಳಿಗ್ಗೆ ಪುತ್ತೂರು ನ್ಯಾಯಾಲಯದ ಸಂಕೀರ್ಣದ ಒಳಗೆ ವಿಷಕಾರಿ ಪದಾರ್ಥವನ್ನು ಸೇವಿಸಿ ಅಸ್ವಸ್ಥಗೊಂಡ ಘಟನೆ ನಡೆದಿದೆ.
ರವಿಯವರ ಪತ್ನಿ ವೈವಾಹಿಕ ಮನಸ್ತಾಪದ ಹಿನ್ನೆಲೆಯಲ್ಲಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಈ ವಿಚಾರದ ಮಾಹಿತಿ ತಿಳಿದ ರವಿಯವರು ಪುತ್ತೂರು ನ್ಯಾಯಾಲಯದ ಸಂಕೀರ್ಣಕ್ಕೆ ತೆರಳಿ, ನ್ಯಾಯಾಲಯದ ಒಳಗೆ ಪ್ರವೇಶಿಸಿದ ಬಳಿಕ ಯಾವುದೋ ವಿಷಕಾರಿ ಪದಾರ್ಥವನ್ನು ಸೇವಿಸಿ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಬಳಿಕ ರವಿಯವರನ್ನು ತಕ್ಷಣ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಿಸಲಾಗಿದೆ. ರವಿಯವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
ನ್ಯಾಯಾಲಯದ ಸಂಕೀರ್ಣದೊಳಗೆ ಘಟನೆ ನಡೆದ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಲಯದ ನ್ಯಾಯಾಧೀಶರು ಸ್ವಯಂ ದೂರು ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಸೂಚಿಸಿದ್ದಾರೆ.
ಘಟನೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.






