
ಕೇರಳದ ಗೋವಿಂದಪುರಂ ನಿವಾಸಿ ದೀಪಕ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಾಮಾಜಿಕ ಮಾಧ್ಯಮ ಪ್ರಭಾವಿ ಹಾಗೂ ಯೂಟ್ಯೂಬರ್ ಶಿಮಿತಾ ಮುಸ್ತಫಾ ಅವರನ್ನು ಪೊಲೀಸರು ಬಂಧಿಸಿದ್ದಾರೆ
ವೈದ್ಯಕೀಯ ಕಾಲೇಜು ಪೊಲೀಸ್ ಠಾಣೆಯ ವಿಶೇಷ ತನಿಖಾ ತಂಡವು, ಶಿಮಿತಾ ಮುಸ್ತಫಾ ಅವರು ವಡಗರ ಪ್ರದೇಶದಲ್ಲಿರುವ ತಮ್ಮ ಸಂಬಂಧಿಕರ ಮನೆಯಲ್ಲಿ ತಂಗಿರುವ ಮಾಹಿತಿ ಮೇರೆಗೆ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದುಕೊಂಡಿದೆ.
ಬಂಧನದ ಬಳಿಕ, ನಿಯಮಾನುಸಾರವಾಗಿ ಕೊಯಿಲಾಂಡಿ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.
ವೈದ್ಯಕೀಯ ತಪಾಸಣೆ ನಂತರ ಶಿಮಿತಾಳನ್ನು ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಮುಂದಿನ ವಿಚಾರಣೆ ಪ್ರಕ್ರಿಯೆ ಮುಂದುವರಿದಿದೆ. ದೀಪಕ್ ಆತ್ಮಹತ್ಯೆಗೆ ಶಿಮಿತಾ ಮಾನಸಿಕ ಒತ್ತಡ ಉಂಟುಮಾಡಿದ್ದಾರೆ ಎಂಬ ಆರೋಪ ಪ್ರಕರಣದಲ್ಲಿ ಕೇಳಿಬಂದಿದ್ದು, ಇದರ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಪ್ರಕರಣ ಕೇರಳದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಸಾಮಾಜಿಕ ಮಾಧ್ಯಮ ಪ್ರಭಾವಿಗಳ ಜವಾಬ್ದಾರಿ, ಆನ್‌ಲೈನ್ ವರ್ತನೆ ಹಾಗೂ ಅದರ ಪರಿಣಾಮಗಳ ಬಗ್ಗೆ ಮತ್ತೆ ಚರ್ಚೆ ಆರಂಭವಾಗಿದೆ. ತನಿಖೆಯ ಭಾಗವಾಗಿ ಡಿಜಿಟಲ್ ಸಾಕ್ಷ್ಯಗಳು, ಕರೆ ವಿವರಗಳು ಮತ್ತು ಸಾಮಾಜಿಕ ಮಾಧ್ಯಮ ಚಟುವಟಿಕೆಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಪೊಲೀಸರು ಶಿಮಿತಾಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದ್ದು, ತನಿಖೆ ಮುಗಿದ ನಂತರ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಈ ಪ್ರಕರಣದಲ್ಲಿ ಇನ್ನಷ್ಟು ಬೆಳವಣಿಗೆಗಳು ಏನೆಲ್ಲಾ ನಡೆಯಲಿವೆ ಎಂಬುದನ್ನು ಕಾದು ನೋಡಬೇಕಿದೆ.






