ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು–ಜೋಕಟ್ಟೆ ಪ್ರದೇಶದಲ್ಲಿ ಕಳೆದ ವರ್ಷದ ಸೆಪ್ಟೆಂಬರ್ 23ರಂದು ನಡೆದಿದ್ದ ಮನೆಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿ ಚಿನ್ನಾಭರಣ, ನಗದು ಹಾಗೂ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಮೊಹಮ್ಮದ್ ಷರೀಫ್ ಅವರು ತಮ್ಮ ಸಂಬಂಧಿಕರ ಮೆಹಂದಿ ಕಾರ್ಯಕ್ರಮಕ್ಕೆ ಕಳವಾರಿಗೆ ತೆರಳಿದ್ದ ಸಂದರ್ಭದಲ್ಲಿ, ರಾತ್ರಿ ಅವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಮನೆಯಲ್ಲಿದ್ದ ಸುಮಾರು ₹23 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹1.25 ಲಕ್ಷ ನಗದು ಹಣ ಕಳವಾಗಿರುವ ಕುರಿತು ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ BNS 2023ರ ಕಲಂ 331(3), 331(4), 305 ಅಡಿಯಲ್ಲಿ ಮೊ.ನಂ 176/2025 ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.
ತನಿಖೆ ವೇಳೆ ಅಬ್ದುಲ್ ನಾಸರ್ ಅಲಿಯಾಸ್ ನಾಸಿರ್ ಅಲಿಯಾಸ್ ನಾಚಿ (31) ಎಂಬಾತ ಕಳ್ಳತನ ನಡೆಸಿ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿರುವ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಲುಕ್ ಔಟ್ ಸರ್ಕ್ಯುಲರ್ (LOC) ಜಾರಿಗೊಳಿಸಿದ್ದರು. ಬಳಿಕ LOC ಆಧಾರದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಪಿರ್ಯಾದಿದಾರರ ಸಂಬಂಧಿಯಾದ ಕಳವಾರು ನಿವಾಸಿ ಮಯ್ಯದ್ದಿ ಇಮ್ರಾನ್ ಜೊತೆಗೆ ಸೇರಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
ಆರೋಪಿಯಿಂದ ಸುಮಾರು ₹27 ಲಕ್ಷ ಮೌಲ್ಯದ 222 ಗ್ರಾಂ ಚಿನ್ನಾಭರಣ, ₹20,000 ನಗದು ಹಾಗೂ ಸುಮಾರು ₹50,000 ಮೌಲ್ಯದ ಸ್ಕೂಟರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!