ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆ.ಎಸ್‌.ಆರ್‌.ಟಿ.ಸಿ)ಗೆ ಸೇರಿದ ಎಲ್ಲ ಬಸ್ಸುಗಳು ಇನ್ನು ಮುಂದೆ ನಗರದ ಕೇಂದ್ರ ಭಾಗದಲ್ಲೂ ಸಂಚರಿಸಲು ಅವಕಾಶ ನೀಡಲಾಗಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಿಂದ ಹೊಸ ಅಧಿಸೂಚನೆ ಹೊರಡಿಸಲಾಗಿದೆ.
ಈ ಮೊದಲು ಜಿಲ್ಲಾಧಿಕಾರಿ ಕಚೇರಿಯಿಂದ 5–1–1991 ಹಾಗೂ 6–4–1993ರಂದು ಹೊರಡಿಸಲಾದ ಅಧಿಸೂಚನೆಗಳ ಮೂಲಕ ಕೆಎಸ್‌ಆರ್‌ಟಿಸಿ ಬಸ್ಸುಗಳ ನಗರ ಕೇಂದ್ರ ಭಾಗದ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಇದೀಗ ಆ ನಿರ್ಬಂಧಕ್ಕೆ ವಿನಾಯಿತಿ ನೀಡಿ ಹೊಸ ಆದೇಶ ಹೊರಡಿಸಲಾಗಿದೆ.
ನಗರದ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಮಹಿಳೆಯರು ಶಕ್ತಿ ಯೋಜನೆಯ ಸೌಲಭ್ಯವನ್ನು ಸುಲಭವಾಗಿ ಪಡೆಯಲು, ಸಾರ್ವಜನಿಕ ಆಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಅನುಕೂಲ ಕಲ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸಾರ್ವಜನಿಕರ ಅನುಕೂಲ ಹಾಗೂ ಸುರಕ್ಷತೆಯನ್ನು ಗಮನದಲ್ಲಿಟ್ಟು, ಮಂಗಳೂರು ನಗರದ ಕೇಂದ್ರ ಭಾಗದಲ್ಲಿ ಸಾರ್ವಜನಿಕ ಸಮೂಹ ಸಾರಿಗೆ ವ್ಯವಸ್ಥೆಯನ್ನು ಉತ್ತೇಜಿಸುವುದು ಮತ್ತು ವೈಯಕ್ತಿಕ ವಾಹನಗಳ ಬಳಕೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಸ್ಪಷ್ಟಪಡಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!