
ಪುತ್ತೂರು: ಕಾಂಗ್ರೆಸ್ ಪಕ್ಷವು ಸಂಘಟನಾ ಬಲವರ್ಧನೆಗೆ ಪ್ರಚಾರ ಸಮಿತಿಗೆ ಹೆಚ್ಚಿನ ಒತ್ತು ನೀಡಿದ್ದು, ಜಿಲ್ಲಾ ಪ್ರಚಾರ ಸಮಿತಿಯ ಪದಾಧಿಕಾರಿಗಳ ಪದಸ್ವೀಕಾರ ಹಾಗೂ ಕಾರ್ಯಕರ್ತರ ಸಮಾವೇಶವನ್ನು ಫೆ.16ರಂದು ಬೆಳಿಗ್ಗೆ 10 ಗಂಟೆಗೆ ಪುತ್ತೂರಿನ ಜೈನ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಮ್ಮದಾಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗೆ ಚುನಾವಣಾ ಅವಧಿಗೆ ಮಾತ್ರ ಸೀಮಿತವಾಗಿದ್ದ ಪ್ರಚಾರ ಸಮಿತಿಯನ್ನು ಇದೀಗ ವರ್ಷಪೂರ್ತಿ ಕಾರ್ಯನಿರ್ವಹಿಸುವ ರೀತಿಯಲ್ಲಿ ಮರುರಚಿಸಲಾಗಿದೆ ಎಂದರು. ಮಂಗಳೂರು ಮತ್ತು ಮೂಲ್ಕಿ ಭಾಗವನ್ನು ಪ್ರತ್ಯೇಕ ಘಟಕವಾಗಿ ಹಾಗೂ ಬಂಟ್ವಾಳ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ಕ್ಷೇತ್ರಗಳನ್ನು ಗ್ರಾಮಾಂತರ ಜಿಲ್ಲೆಯ ಘಟಕವಾಗಿ ವಿಭಾಗಿಸಿ ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದರು.
ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ನೇಮಕಾತಿ ಮಾಡಿದ್ದು, ಮುಂದಿನ ದಿನಗಳಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪಕ್ಷದ ಪರ ವ್ಯವಸ್ಥಿತ ಪ್ರಚಾರ ಕಾರ್ಯಗಳನ್ನು ಕೈಗೊಳ್ಳಲಾಗುತ್ತದೆ. ಸರ್ಕಾರದ ಯೋಜನೆಗಳು, ಪಕ್ಷದ ಕಾರ್ಯಕ್ರಮಗಳು ಮತ್ತು ಸಿದ್ಧಾಂತಗಳ ಬಗ್ಗೆ ನಿರಂತರ ಜಾಗೃತಿ ಮೂಡಿಸುವ ಕಾರ್ಯ ನಡೆಯಲಿದೆ ಎಂದು ವಿವರಿಸಿದರು.
ಕಾರ್ಯಕ್ರಮಕ್ಕೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಅಶೋಕ್ ರೈ ಉದ್ಘಾಟಿಸಲಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷ ಮುನೀರ್ ಜನ್ಸಾಲೆ ಹಾಗೂ ಮುಖ್ಯ ಸಂಯೋಜಕ ಸುಧೀರ್ ಕುಮಾರ್ ಮರೋಳಿ ಮುಖ್ಯ ಭಾಷಣ ಮಾಡಲಿದ್ದಾರೆ.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಮಾಜಿ ಸಚಿವ ಬಿ. ರಮಾನಾಥ ರೈ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಾಜಿ ಶಾಸಕ ಜೆ.ಆರ್. ಲೋಬೋ ಸೇರಿದಂತೆ ಹಲವು ಮುಖಂಡರು ಭಾಗವಹಿಸಲಿದ್ದಾರೆ.
ಪ್ರಚಾರ ಸಮಿತಿಯು ವಿಧಾನಸಭಾ ಕ್ಷೇತ್ರ ಹಾಗೂ ಬ್ಲಾಕ್ ಮಟ್ಟದಲ್ಲಿ ಸಮಿತಿಗಳನ್ನು ಈಗಾಗಲೇ ರಚಿಸಿದ್ದು, ಗ್ರಾಮ ಮತ್ತು ತಾಲೂಕು ಮಟ್ಟಗಳಲ್ಲಿ ನಿರಂತರ ಕಾರ್ಯಕ್ರಮಗಳನ್ನು ನಡೆಸಲಿದೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ಡಾ. ಕೆ.ಬಿ. ರಾಜಾರಾಂ, ಬ್ಲಾಕ್ ಸಮಿತಿ ಅಧ್ಯಕ್ಷ ಅಮರನಾಥ ಗೌಡ ಮತ್ತು ಕಡಬ ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಯತೀಶ್ ಕುಮಾರ್ ಬಾನಡ್ಕ ಉಪಸ್ಥಿತರಿದ್ದರು.







