
ಮೈಸೂರು: ಪ್ರವಾಸಕ್ಕೆ ತೆರಳುವ ವಿಚಾರವಾಗಿ ಗಂಡ-ಹೆಂಡತಿ ನಡುವೆ ನಡೆದ ವಾಗ್ವಾದದ ನಂತರ ಗೃಹಿಣಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ಆದರೆ, ಮೃತೆಯ ಕುಟುಂಬಸ್ಥರು ಇದು ಆತ್ಮಹತ್ಯೆಯಲ್ಲ, ಕೊಲೆ ಇರಬಹುದೆಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಸರಸ್ವತಿಪುರಂ ನಿವಾಸಿ, 46 ವರ್ಷದ ಸಂಧ್ಯಾ ಮೃತಪಟ್ಟವರು. ಮೂಲತಃ ಬೆಂಗಳೂರಿನವರಾದ ಸಂಧ್ಯಾ ಅವರು ಸುಮಾರು 25 ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲೆಯ ರಂಗನಾಥ್ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳು ಇದ್ದು, ಪುತ್ರಿ ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಸಂಧ್ಯಾ ಅವರು ಗಂಡ ಮತ್ತು ಮಗನೊಂದಿಗೆ ಮೈಸೂರಿನ ಸರಸ್ವತಿಪುರಂನಲ್ಲಿ ವಾಸವಿದ್ದರು.
ಪೊಲೀಸರ ಮಾಹಿತಿ ಪ್ರಕಾರ, ನಿನ್ನೆ ರಾತ್ರಿ ಪ್ರವಾಸಕ್ಕೆ ತೆರಳುವ ವಿಚಾರವಾಗಿ ಗಂಡ-ಹೆಂಡತಿ ನಡುವೆ ವಾಗ್ವಾದ ನಡೆದಿದೆ. ಬಳಿಕ ಗಂಡ ಮನೆಯಿಂದ ಹೊರಗೆ ತೆರಳಿದ್ದಾಗಿ ತಿಳಿದುಬಂದಿದೆ. ಈ ಮಧ್ಯೆ, ಮನೆಯಲ್ಲಿ ಇರುವ ಕೋಣೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸಂಧ್ಯಾ ಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನೀಡದ ಹಿನ್ನೆಲೆ ಈ ದುರ್ಘಟನೆ ಸಂಭವಿಸಿದೆ ಎಂಬ ಮಾತು ಕೇಳಿಬರುತ್ತಿದೆ. ಆದರೆ, ಸಂಧ್ಯಾ ಅವರ ಸಹೋದರ ಗುರುಮೂರ್ತಿ ಅವರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಗಂಡ ಹಾಗೂ ಮಗನ ವಿರುದ್ಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಘಟನೆಯ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮರಣದ ನಿಖರ ಕಾರಣ ತಿಳಿಯಲು ತನಿಖೆ ಕೈಗೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಸ್ಪಷ್ಟತೆ ಸಿಗಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.







