
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಮಟ್ಟದ ‘ಉದ್ಯೋಗ ಮೇಳ–2026’ ಫೆ. 21ರಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಆವರಣದಲ್ಲಿ ನಡೆಯಲಿದೆ.
ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯುವ ಈ ಮೇಳದಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಸಾಫ್ಟ್‌ವೇರ್, ಉತ್ಪಾದನಾ ವಲಯ, ಆಟೋಮೊಬೈಲ್, ಬ್ಯಾಂಕಿಂಗ್, ಹಣಕಾಸು ಹಾಗೂ ವಿಮಾ, ರಿಟೇಲ್ ಮತ್ತು ಗ್ರಾಹಕ ಸೇವೆ, ನಿರ್ಮಾಣ ಮತ್ತು ರಿಯಲ್ ಎಸ್ಟೇಟ್, ಶಿಕ್ಷಣ, ಆರೋಗ್ಯ, ಹಾಸ್ಪಿಟಾಲಿಟಿ, ಹೊರಗುತ್ತಿಗೆ, ಜೀವ ವಿಜ್ಞಾನ, ಆಹಾರ ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳ 125ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ.
ಎಸ್ಎಸ್ಎಲ್‌ಸಿ മുതല്ಿ ಸ್ನಾತಕೋತ್ತರ ಪದವಿಯವರೆಗೆ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಭಾಗವಹಿಸಬಹುದಾಗಿದೆ. 5,000ಕ್ಕೂ ಅಧಿಕ ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಇದ್ದು, ಈಗಾಗಲೇ ಅನೇಕರು ನೋಂದಣಿ ಮಾಡಿಕೊಂಡಿದ್ದಾರೆ. ಮೇಳದ ದಿನ ಸ್ಥಳದಲ್ಲೇ ಹೆಸರು ನೋಂದಾಯಿಸುವ ವ್ಯವಸ್ಥೆಯೂ ಕಲ್ಪಿಸಲಾಗಿದೆ. ಕಂಪನಿಗಳ ಅವಶ್ಯಕತೆಗೆ ಅನುಗುಣವಾಗಿ ಪ್ರತ್ಯೇಕ ಕೊಠಡಿಗಳನ್ನು ಸಜ್ಜುಗೊಳಿಸಲಾಗುತ್ತಿದ್ದು, ಪೂರಕ ವ್ಯವಸ್ಥೆಗಳ ಸಿದ್ಧತೆ ಭರದಿಂದ ಸಾಗುತ್ತಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಬೆಳಿಗ್ಗೆ ಸಾವರ್ಕರ್ ಸಭಾಭವನದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ (ಅಧ್ಯಕ್ಷತೆ), ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.
ಉದ್ಯೋಗಾಕಾಂಕ್ಷಿಗಳು ಬೆಳಿಗ್ಗೆ 9 ಗಂಟೆಗೆ ಮುಂಚಿತವಾಗಿ ಕಾಲೇಜು ಆವರಣದಲ್ಲಿ ಹಾಜರಾಗಿ ತಮ್ಮ ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸಿಕೊಂಡು, ತಮಗೆ ಇಷ್ಟವಾದ ಕಂಪನಿಗಳ ಸಂದರ್ಶನದಲ್ಲಿ ಭಾಗವಹಿಸಿ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣಭಟ್ ತಿಳಿಸಿದ್ದಾರೆ.






