ಬೆಂಗಳೂರು/ಪುತ್ತೂರು, ಫೆ.26: ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಹಾಗೂ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಶ್ರೀಮತಿ ವೇದಶ್ರೀ ನಿತ್ಯಾ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಫೆಬ್ರವರಿ 16ರಂದು ಕಾಲೇಜಿನ ವಿದ್ಯಾರ್ಥಿನಿಯರು ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ಹಾಗೂ ರಸ್ತೆ ತಡೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಸಲ್ಲಿಸಿದ್ದ ಪ್ರಸ್ತಾವನೆಯ ಮೇರೆಗೆ ಸರ್ಕಾರ ಈ ತೀರ್ಮಾನ ಕೈಗೊಂಡಿದೆ. ಘಟನೆಯ ಬಳಿಕ ಫೆ.17ರಂದು ಪ್ರಾದೇಶಿಕ ಜಂಟಿ ನಿರ್ದೇಶಕರು ಕಾಲೇಜಿಗೆ ಭೇಟಿ ನೀಡಿ ಪ್ರಾಂಶುಪಾಲರು, ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರೊಂದಿಗೆ ಚರ್ಚಿಸಿ ವರದಿ ಸಲ್ಲಿಸಿದ್ದರು. ಪುತ್ತೂರು ನಗರ ಪೊಲೀಸ್ ಠಾಣೆಯ ವರದಿ ಪ್ರಕಾರ, ವಿದ್ಯಾರ್ಥಿನಿಯರು ಪೂರ್ವಾನುಮತಿ ಪಡೆಯದೆ ರಸ್ತೆ ತಡೆ ನಡೆಸಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗಿರುವುದಾಗಿ ತಿಳಿಸಲಾಗಿದೆ.
ಇದೇ ವೇಳೆ, ಮಾನ್ಯ ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು ತಮ್ಮ ಪತ್ರದಲ್ಲಿ ವಿದ್ಯಾರ್ಥಿನಿಯರಿಗೆ ಉಂಟಾದ ಆರೋಗ್ಯ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರದೆ, ತಪ್ಪು ಮಾಹಿತಿ ನೀಡಿ ಪ್ರತಿಭಟನೆಗೆ ಪ್ರೇರೇಪಿಸಿರುವ ಬಗ್ಗೆ ಆರೋಪಿಸಿದ್ದಾರೆ. ವಿದ್ಯಾರ್ಥಿನಿಯರ ಸಮಸ್ಯೆಗಳ ಬಗ್ಗೆ ಯಾವುದೇ ಲಿಖಿತ ದಾಖಲೆ ಅಥವಾ ಸಭಾ ನಡವಳಿಯ ವಿವರಗಳನ್ನು ನೀಡಲಾಗಿಲ್ಲವೆಂಬುದೂ ವರದಿಯಲ್ಲಿ ಉಲ್ಲೇಖವಾಗಿದೆ.
ಈ ಹಿನ್ನೆಲೆಯಲ್ಲಿ, ವಿದ್ಯಾರ್ಥಿನಿಯರ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಮತ್ತು ಇಲಾಖಾ ತನಿಖೆಯ ನಿಷ್ಪಕ್ಷಪಾತ ನಿರ್ವಹಣೆಯನ್ನು ಮನಗಂಡು, ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ 10(1)(ಡಿ)ರಡಿ ಅವರನ್ನು ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ.
ರಾಜ್ಯಪಾಲರ ಆದೇಶಾನುಸಾರ ಹಾಗೂ ಅವರ ಹೆಸರಿನಲ್ಲಿ ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!