
ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಹೊಸವಕ್ಲು ಪ್ರದೇಶದಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಸಿದ ಆರೋಪದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಮನೆ ಆವರಣವನ್ನು ಜಪ್ತಿ ಮಾಡಲಾಗಿದೆ.
ಫೆ. 26ರ ರಾತ್ರಿ ಅಕ್ರಮವಾಗಿ ಗೋಹತ್ಯೆ ನಡೆಸಿ ಮಾಂಸ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಉಪ್ಪಿನಂಗಡಿ ಠಾಣೆಯ ಪಿಎಸ್‌ಐ ಸುತೇಶ್ ಕೆ.ಪಿ. ಅವರು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದರು. ಹೆಚ್. ಅಬ್ದುಲ್ ರಹಿಮಾನ್ ಅವರ ಮನೆ ಆವರಣಕ್ಕೆ ತಲುಪಿದಾಗ ಅಲ್ಲಿದ್ದ ಇಬ್ಬರು ವ್ಯಕ್ತಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳ ಪರಿಶೀಲನೆಯ ವೇಳೆ ಪ್ಯಾಕೆಟ್‌ಗಳಲ್ಲಿ ಸಂಗ್ರಹಿಸಲಾಗಿದ್ದ ಗೋಮಾಂಸ ಹಾಗೂ ಸಮೀಪದಲ್ಲಿದ್ದ ಆಟೋ ರಿಕ್ಷಾದಲ್ಲಿಯೂ ಮಾಂಸದ ಪ್ಯಾಕೆಟ್‌ಗಳು ಪತ್ತೆಯಾಗಿವೆ. ಒಟ್ಟು 56 ಕೆಜಿ ಗೋಮಾಂಸವನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ತೂಕದ ಯಂತ್ರ, ಆಟೋ ರಿಕ್ಷಾ, ಮೊಬೈಲ್ ಫೋನ್ ಸೇರಿದಂತೆ ಇತರೆ ಸಂಬಂಧಿತ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 27/2026ರಂತೆ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020ರ ಕಲಂ 4 ಮತ್ತು 12 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 3(5) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಜಾನುವಾರುಗಳ ವಧೆಗೆ ಬಳಸಲಾಗಿದೆ ಎನ್ನಲಾದ ಆರೋಪಿಯ ಮನೆ ಆವರಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಪರಾರಿಯಾದವರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.







