
ಬಂಟ್ವಾಳ: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ವಿಟ್ಲ ಪೊಲೀಸರು ಪತ್ತೆಹಚ್ಚಿ, ಇಬ್ಬರನ್ನು ವಶಕ್ಕೆ ಪಡೆದು ವಾಹನವನ್ನು ಜಪ್ತಿ ಮಾಡಿದ್ದಾರೆ.
ದಿನಾಂಕ 26-02-2026 ರಂದು ರಾತ್ರಿ, ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನ ನಿಂತಿರುವ ಬಗ್ಗೆ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ, ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ (ಕಾ&ಸು) ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದರು. ಈ ವೇಳೆ KA-13-B-8178 ನೋಂದಣಿಯ ಅಶೋಕ್ ಲೈಲ್ಯಾಂಡ್ ‘ದೋಸ್ತ್’ ವಾಹನ ರಸ್ತೆ ಬದಿಯಲ್ಲಿ ನಿಂತಿದ್ದು, ಅದರಲ್ಲಿ ಎರಡು ದನಗಳನ್ನು ಹಿಂಸಾತ್ಮಕವಾಗಿ ತುಂಬಿಸಿಕೊಂಡು ಸಾಗಾಟ ಮಾಡುತ್ತಿರುವುದು ಪತ್ತೆಯಾಯಿತು.
ವಾಹನದಲ್ಲಿದ್ದ ಮಂಡ್ಯ ನಿವಾಸಿಗಳಾದ ಚಾಲಕ ನವೀನ ಹಾಗೂ ಚೇತನ್ ಅವರನ್ನು ವಿಚಾರಿಸಿದಾಗ, ಚನ್ನರಾಯಪಟ್ಟಣದ ಶಂಕರ ಎಂಬವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಾಲೆತ್ತೂರಿನ ಶಾಫಿ ಅವರಿಗೆ ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಕಳುಹಿಸಿರುವುದಾಗಿ ತಿಳಿದುಬಂದಿದೆ. ಅಲ್ಲದೆ, ಜಾನುವಾರು ಸಾಗಾಟಕ್ಕೆ ಬೇರೆಯವರ ಹೆಸರಿನಲ್ಲಿ ದಾಖಲಾತಿ ಪಡೆದು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ವಾಹನ ಹಾಗೂ ಜಾನುವಾರುಗಳನ್ನು ಸ್ವಾಧೀನಪಡಿಸಿಕೊಂಡು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 51/2026ರಲ್ಲಿ ಪ್ರಕರಣ ದಾಖಲಿಸಲಾಗಿದೆ. ಕರ್ನಾಟಕ ಗೋಹತ್ಯೆ ನಿಷೇಧ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ-2020ರ ಕಲಂ 4, 7, 12, ಪ್ರಿವೆನ್ಷನ್ ಆಫ್ ಕ್ರುಯೆಲ್ಟಿ ಟು ಅನಿಮಲ್ಸ್ ಕಾಯಿದೆ-1960ರ ಕಲಂ 4, 11 ಹಾಗೂ ಭಾರತೀಯ ಮೋಟಾರು ವಾಹನ ಕಾಯಿದೆ-1988ರ ಕಲಂ 192(A) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.







