

ಬೆಳ್ಳಾರೆ: ಮನೆ ಕಳವು ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ದಿನಾಂಕ 24.03.2022ರಂದು ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳವು ಪ್ರಕರಣದಲ್ಲಿ (ಅಪರಾಧ ಸಂಖ್ಯೆ 22/2022, ಕಲಂ 457, 380 ಐಪಿಸಿ) ಬೆಳ್ತಂಗಡಿ ತಾಲೂಕಿನ ನೆರಿಯ ನಿವಾಸಿ ಶರತ್ ಎಸ್ (24) ಆರೋಪಿಯಾಗಿದ್ದು, ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.
ಬೆಳ್ಳಾರೆ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿಗಳು ಆರೋಪಿಯನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರಾದ ಶಿವಣ್ಣ ಹೆಚ್.ಆರ್. ಅವರು ಕಲಂ 457 ಐಪಿಸಿ ಅಡಿಯಲ್ಲಿ 6 ತಿಂಗಳ ಸರಳ ಕಾರಾಗೃಹ ಶಿಕ್ಷೆ ಹಾಗೂ ರೂ.500 ದಂಡ, ಕಲಂ 380 ಐಪಿಸಿ ಅಡಿಯಲ್ಲಿ 10 ತಿಂಗಳ ಸರಳ ಕಾರಾಗೃಹ ಶಿಕ್ಷೆ ಹಾಗೂ ರೂ.500 ದಂಡ ವಿಧಿಸಿದ್ದಾರೆ. ದಂಡ ಪಾವತಿಸದಿದ್ದರೆ 10 ದಿನಗಳ ಹೆಚ್ಚುವರಿ ಶಿಕ್ಷೆ ಅನುಭವಿಸುವಂತೆ ಆದೇಶಿಸಲಾಗಿದೆ.
ಪ್ರಕರಣದ ತನಿಖಾಧಿಕಾರಿಯಾಗಿದ್ದ ಸಂತೋಷ್ ಬಿ.ಪಿ., ಪಿಎಸ್‌ಐ ಅವರು ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು. ಸಹಾಯಕ ಸರ್ಕಾರಿ ಅಭಿಯೋಜಕಿ ಪ್ರೀತಿ ಎಂ.ಸಿ. ಅವರು ಸರ್ಕಾರ ಪರ ಸಮರ್ಥ ವಾದ ಮಂಡಿಸಿದ್ದರು.
ಇದೇ ವೇಳೆ, ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ 269 ಅಡಿಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ನ್ಯಾಯಾಲಯವು ರೂ.1,000 ದಂಡ ಅಥವಾ 10 ದಿನಗಳ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ.








