
ಸುಳ್ಯ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ನ್ಯಾಯಾಲಯದಿಂದ 15 ದಿನಗಳ ಸಮುದಾಯ ಸೇವೆಗೆ ಗುರಿಯಾಗಿದ್ದ ಯುವಕನೊಬ್ಬ, ಆ ಸೇವೆಯ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿ ಸುಳ್ಯ ನಿವಾಸಿ ರಕ್ಷಿತ್ ಜಿ (29) ಅವರಿಗೆ ನ್ಯಾಯಾಲಯ 15 ದಿನಗಳ ಸಮುದಾಯ ಸೇವೆ ವಿಧಿಸಿತ್ತು. ಅದರಂತೆ ಅವರು ಮಾರ್ಚ್ 15ರಂದು ಸಾರ್ವಜನಿಕರಿಗೆ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ಹಾಗೂ ನಿಯಂತ್ರಣ ಕಾರ್ಯದಲ್ಲಿ ಭಾಗವಹಿಸಿದ್ದರು.
ಅದೇ ದಿನ ತಾನು ಸಲ್ಲಿಸಿದ ಸಮುದಾಯ ಸೇವೆಯ ಚಿತ್ರಗಳು ಮತ್ತು ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವುದನ್ನು ಗಮನಿಸಿದ ರಕ್ಷಿತ್ ಜಿ, ಮನನೊಂದು ವಿಷ ಸೇವಿಸಿದ್ದಾನೆ ಎನ್ನಲಾಗಿದೆ. ತಕ್ಷಣ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.








