ಪುತ್ತೂರು: ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ದಾರಿಯು ಸುಗಮವಾಗಿದ್ದು, ಅದರ ಮೊದಲ ಹಂತವಾಗಿ 300 ಹಾಸಿಗೆಗಳ ಬೋಧನಾ ಆಸ್ಪತ್ರೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ಸೇಡಿಯಾಪುನಲ್ಲಿ ಕಾಯ್ದಿರಿಸಲಾದ 40 ಎಕರೆ ಜಾಗದಲ್ಲಿ ಈ ಆಸ್ಪತ್ರೆ ನಿರ್ಮಾಣವಾಗಲಿದೆ.
2025–26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ–138ರಲ್ಲಿ ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವ ಉದ್ದೇಶವನ್ನು ಸರ್ಕಾರ ಘೋಷಿಸಿತ್ತು. ಇದಕ್ಕಾಗಿ ಈಗಿರುವ 100 ಹಾಸಿಗೆಗಳ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸುವ ಕ್ರಮ ಕೈಗೊಳ್ಳುವುದಾಗಿ ತಿಳಿಸಲಾಗಿತ್ತು. ಆದರೆ, ಪ್ರಸ್ತುತ ಸ್ಥಳದಲ್ಲಿ ಯೋಜನೆ ಕಾರ್ಯಸಾಧ್ಯವಲ್ಲವೆಂಬ ತಾಂತ್ರಿಕ ಅಭಿಪ್ರಾಯದ ಹಿನ್ನೆಲೆಯಲ್ಲಿ ಯೋಜನೆಯನ್ನು ವೈದ್ಯಕೀಯ ಶಿಕ್ಷಣ ಇಲಾಖೆಗೆ ವರ್ಗಾಯಿಸಲಾಗಿದೆ.
ಸರ್ಕಾರದ ಆದೇಶ ಸಂಖ್ಯೆ 104 ಸಿಜಿಎಂ 2025, ದಿನಾಂಕ 04.12.2025ರಂತೆ ಯೋಜನೆ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧೀನಕ್ಕೆ ಬಿದ್ದಿದೆ. ಮುಖ್ಯ ಇಂಜಿನಿಯರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರಿಂಗ್ ಘಟಕ, ಬೆಂಗಳೂರು ಇವರು ₹180 ಕೋಟಿ ಅಂದಾಜು ವೆಚ್ಚದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ಕೋರಿದ್ದರು. ಆರ್ಥಿಕ ಇಲಾಖೆಯ ಅಭಿಪ್ರಾಯದೊಂದಿಗೆ ಪರಿಶೀಲನೆ ನಡೆಸಿದ ಬಳಿಕ ಸರ್ಕಾರದಿಂದ ಅಂತಿಮ ಮುದ್ರೆ ಬಿದ್ದಿದೆ.
ಕಂದಾಯ ಇಲಾಖೆಯಿಂದ ಗುರುತಿಸಲಾದ ಸೇಡಿಯಾಪುನ 40 ಎಕರೆ ಜಾಗದಲ್ಲಿ ಜಿಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗೆ ಮೀಸಲು ನೀಡಲಾಗಿದ್ದು, 300 ಹಾಸಿಗೆಗಳ ಬೋಧನಾ ಆಸ್ಪತ್ರೆ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆಯೂ ಪೂರ್ಣಗೊಂಡಿದೆ. ಶೀಘ್ರದಲ್ಲೇ ಶಿಲಾನ್ಯಾಸ ಕಾರ್ಯಕ್ರಮ ನಡೆಯುವ ನಿರೀಕ್ಷೆಯಿದೆ.
ಈ ಬಗ್ಗೆ ಶಾಸಕ ಅಶೋಕ್ ರೈ ಅವರು, “ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಚಾಲನೆ ದೊರಕಿದೆ. ಮೊದಲು 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣವಾಗಬೇಕು. ಇದಕ್ಕಾಗಿ ₹180 ಕೋಟಿ ಮಂಜೂರಾಗಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ಸಿಗಲಿದೆ. ಆಸ್ಪತ್ರೆ ನಿರ್ಮಾಣವಾದ ಬಳಿಕ ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣ ಪ್ರಕ್ರಿಯೆ ಆರಂಭವಾಗಲಿದೆ. ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಿರುವ ತೃಪ್ತಿ ಇದೆ,” ಎಂದು ತಿಳಿಸಿದ್ದಾರೆ.
ಪುತ್ತೂರಿನ ಜನತೆಯ ಬಹುಕಾಲದ ಬೇಡಿಕೆಯಾಗಿದ್ದ ವೈದ್ಯಕೀಯ ಕಾಲೇಜು ಯೋಜನೆಗೆ ಎರಡೇ ವರ್ಷಗಳಲ್ಲಿ ಸ್ಪಷ್ಟ ರೂಪ ದೊರೆತಿರುವುದು ಗಮನಾರ್ಹವಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!