ಕುಂಬಳೆ: ಸಮೀಪದ ಮೊಗ್ರಾಲ್‌ನಲ್ಲಿ ಬೂತ್ ಮಟ್ಟದ ಅಧಿಕಾರಿ ಹಾಗೂ ಶಿಕ್ಷಕರಾಗಿದ್ದ ಮುಹಮ್ಮದ್ ಸವಾದ್ (32) ಅವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಬೆಳಕಿಗೆ ಬಂದಿದೆ.
ಶನಿವಾರ ಬೆಳಿಗ್ಗೆಯಿಂದ ಅವರು ನಾಪತ್ತೆಯಾಗಿದ್ದರೆಂದು ಕುಟುಂಬಸ್ಥರು ತಿಳಿಸಿದ್ದಾರೆ. ನಂತರ ಅವರ ಬೈಕ್ ಸ್ಥಳೀಯ ಸೇತುವೆ ಮೇಲೆ ಪತ್ತೆಯಾದ ಹಿನ್ನೆಲೆಯಲ್ಲಿ ಅನುಮಾನಗೊಂಡು ಶೋಧ ಕಾರ್ಯಾಚರಣೆ ಕೈಗೊಳ್ಳಲಾಯಿತು. ಬಳಿಕ ನದಿಯಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಕಂಡುಬಂದ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಕೆಲಸದ ಒತ್ತಡ ಅಥವಾ ವೈಯಕ್ತಿಕ ಕಾರಣಗಳಿಂದ ಈ ಕೃತ್ಯಕ್ಕೆ ಮುಂದಾಗಿರಬಹುದು ಎಂಬ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳದಲ್ಲಿ ಆತ್ಮಹತ್ಯೆ ಪತ್ರವೊಂದನ್ನೂ ಪೊಲೀಸರು ಪತ್ತೆಹಚ್ಚಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಜಿಲ್ಲಾಧಿಕಾರಿ ಸಮಗ್ರ ತನಿಖೆಗೆ ಆದೇಶಿಸಿದ್ದು, ಮೃತರ ಕುಟುಂಬಕ್ಕೆ ಅಗತ್ಯ ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ.














