ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ 26ನೇ ಆರೋಪಿಯಾದ ಕೊಡಗು ಜಿಲ್ಲೆಯ ಸೋಮವಾರಪೇಟೆ ಮೂಲದ ರಿಯಾಜ್ ಎಚ್. ವೈ ಅವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ಮಾಸ್ಟರ್ ಮೈಂಡ್ ಎಂದು ಆರೋಪಿಸಲ್ಪಟ್ಟ ಮುಸ್ತಫಾ ಪೈಚಾರ್‌ಗೆ ಆಶ್ರಯ ನೀಡಿದ್ದ ಆರೋಪದ ಮೇಲೆ ರಿಯಾಜ್ ಅವರನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿತ್ತು. ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಮುಸ್ತಫಾ ಅಡಗಿಕೂರಲು ಸಹಾಯ ಮಾಡಿದ್ದಾನೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿತ್ತು.
2022ರ ಜುಲೈ 26ರಂದು ‘ಅಕ್ಷಯ್ ಚಿಕನ್ ಸೆಂಟರ್’ ಮುಚ್ಚಿ ಮನೆಗೆ ತೆರಳುತ್ತಿದ್ದ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದರು. ಘಟನೆ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಲಾಗಿದ್ದು, ಇದುವರೆಗೆ 26 ಮಂದಿಯನ್ನು ಬಂಧಿಸಲಾಗಿದೆ.
ಮುಖ್ಯ ಆರೋಪಿ ಮುಸ್ತಫಾ ಪೈಚಾರ್ ಸೇರಿದಂತೆ ಹಲವರು ಇನ್ನೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಕರಣದ ವಿಚಾರಣೆ ಮುಂದುವರಿದಿದೆ.














