ಮಂಗಳೂರು: ತೊಕ್ಕೊಟ್ಟು ಫೈಓವರ್‌ನಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಆರಿಫ್‌ನನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ ಪ್ರಕರಣದಲ್ಲಿ ಪೊಲೀಸರು ಕೆಲವೇ ಗಂಟೆಗಳಲ್ಲಿ ಹಂತಕರು ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ.
ದುಷ್ಕರ್ಮಿಗಳು ಇನ್ನೋವಾ ಕಾರು (ಕೆಎಲ್–86 ಬಿ 6645)ನಲ್ಲಿ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೂಲಕ ಪರಾರಿಯಾಗಿದ್ದರು. ಬೆನ್ನಟ್ಟಿದ ಪೊಲೀಸರಿಗೆ ವಿಟ್ಲ ಠಾಣಾ ವ್ಯಾಪ್ತಿಯ ಬುಡೋಳಿ ಬಳಿ ಕಾರು ಪತ್ತೆಯಾಯಿತು. ಆದರೆ ಆರೋಪಿಗಳು ಕಾರನ್ನು ಅಲ್ಲೇ ಬಿಟ್ಟು ಆಟೋ ರಿಕ್ಷಾದಲ್ಲಿ ತಪ್ಪಿಸಿಕೊಂಡಿರುವುದು ತಿಳಿದುಬಂದಿದೆ. ಆರು ಮಂದಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.
ವಿಟ್ಲ ಮತ್ತು ಮಂಗಳೂರು ಪೊಲೀಸರ ಜಂಟಿ ತಂಡಗಳು ಸಿಸಿಟಿವಿ ದೃಶ್ಯಾವಳಿ ಹಾಗೂ ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿ ಶೋಧ ಕಾರ್ಯ ತೀವ್ರಗೊಳಿಸಿವೆ. ಸ್ಥಳಕ್ಕೆ ಬೆರಳಚ್ಚು ತಜ್ಞರು ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳನ್ನು ಶೀಘ್ರ ಬಂಧಿಸುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.














