ಕೆಲ ದಿನಗಳಿಂದ ರಾಜ್ಯದ (Karnataka) ಹಲವೆಡೆ ಗುಡುಗು ಸಹಿತ ಮಳೆಯಾಗುತ್ತಿದೆ (Rain). ಇದೀಗ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಎಚ್ಚರಿಸಿದೆ.
ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಪ್ರಮುಖವಾಗಿ ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಪ್ರತ್ಯಾವರ್ತ ಮಾರುತಗಳ ಪ್ರಭಾವದಿಂದಾಗಿ ಸಮುದ್ರದ ಕಡೆಯಿಂದ ತೇವಾಂಶಭರಿತ ಮೋಡಗಳು ಭೂಭಾಗದತ್ತ ಚಲಿಸುತ್ತಿವೆ. ಇದರ ಪರಿಣಾಮವಾಗಿ ರಾಜ್ಯದ ವಿವಿಧೆಡೆ ಆಲಿಕಲ್ಲು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಭಾಗಗಳಲ್ಲಿ ಹಗಲು ಬಿಸಿಲಿನ ವಾತಾವರಣವಿದ್ದರೂ, ಸಂಜೆಯ ವೇಳೆಗೆ ಮೋಡ ಕವಿದ ವಾತಾವರಣವಿರಲಿದೆ. ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಹಾಗೂ ಕಾರ್ಕಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು. ಮಲೆನಾಡಿನ ಕೊಡಗು, ಹಾಸನದ ಸಕ್ಲೇಶ್ಪುರ, ಚಿಕ್ಕಮಗಳೂರಿನ ಮೂಡಿಗೆರೆ, ಶೃಂಗೇರಿ ಹಾಗೂ ಶಿವಮೊಗ್ಗದ ಆಗುಂಬೆ ಪರಿಸರದಲ್ಲಿ ಸಂಜೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿಯ ವೇಳೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಹಾವೇರಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಬಹುದು. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಹಾಗೂ ಮಂಡ್ಯ ಭಾಗಗಳಲ್ಲಿಯೂ ಮೋಡ ಕವಿದ ವಾತಾವರಣದೊಂದಿಗೆ ಹಗುರ ಮಳೆಯ ಮುನ್ಸೂಚನೆ ಇದೆ.














