ಬೆಳ್ತಂಗಡಿ: ಬೈಕ್ ಸ್ಕೀಡ್ ಆಗಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಹಸವಾರ ವಿದ್ಯಾರ್ಥಿ ಮೃತಪಟ್ಟಿದ್ದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ತಡರಾತ್ರಿ ಉಜಿರೆ–ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಮಾ. 28ರಂದು ರಾತ್ರಿ ಸುಮಾರು 12.30ರ ವೇಳೆ ಉಜಿರೆಯ ಕಾಲೇಜು ರಸ್ತೆಯಲ್ಲಿರುವ ಪಂಚಮಿ ಲಾಡ್ಜ್ ಮುಂಭಾಗ ಈ ಅಪಘಾತ ಸಂಭವಿಸಿದೆ. ಕಾರ್ಯಕ್ರಮ ಮುಗಿಸಿ ವಾಪಸ್ಸು ಬರುತ್ತಿದ್ದಾಗ ಕೆಟಿಎಂ ಕಂಪನಿಯ ಬೈಕ್ ನಿಯಂತ್ರಣ ತಪ್ಪಿ ಸ್ಕೀಡ್ ಆಗಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅಮ್ಮನಂಗಡಿ ನಿವಾಸಿ ಚಂದ್ರಶೇಖರ್ ಅವರ ಪುತ್ರ ನಿತೇಶ್ (19) ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಪುತ್ತೂರು ಮೂಲದ ಲಿಖಿತ್ (20) ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಬ್ಬರೂ ಉಜಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ನಡೆದ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.














