ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ವಿವಾಹಿತ ಉದ್ಯಮಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಚಿಕಿತ್ಸೆ ಫಲಿಸದೆ ಅವರು ಮಾ.29ರಂದು ಬೆಳಗ್ಗೆ ಮೃತಪಟ್ಟಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕರ್ನೋಡಿ ಪ್ರದೇಶದಲ್ಲಿ ಅಜ್ಜನ ಮನೆಯಲ್ಲಿ ವಾಸವಾಗಿದ್ದ ಹಾಗೂ ಮೂಲತಃ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿಯಾಗಿದ್ದ ಬಿ. ಸುದೀಪ್ ರೈ (36) ಮೃತರು. ಮಾ.17ರಂದು ತಿಂಡಿಯೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಅವರನ್ನು ತಕ್ಷಣ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಸುದೀಪ್ ರೈ ಅವರು ಪುತ್ತೂರು ಸಬ್‌-ರಿಜಿಸ್ಟ್ರಾರ್ ಕಚೇರಿಯಲ್ಲಿ ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿ (28) ಅವರೊಂದಿಗೆ ಫೆ.17ರಂದು ಮನೆಮಂದಿಗೆ ತಿಳಿಸದೆ ವಿವಾಹ ನೋಂದಣಿ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.
ಕಳೆದ ಕೆಲವು ವರ್ಷಗಳಿಂದ ಅವರು ಬೆಳ್ತಂಗಡಿ ತಾಲೂಕಿನಲ್ಲೇ ‘ಎಸ್‌ಆರ್‌ಎನ್‌ ಗ್ರೂಪ್’ ಹೆಸರಿನಲ್ಲಿ ಎಲೆಕ್ಟ್ರಾನಿಕ್ ಮತ್ತು ಸೋಲಾರ್ ಉದ್ಯಮ ನಡೆಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಪೊಲೀಸರ ತನಿಖೆಯಿಂದ ಹೆಚ್ಚಿನ ಮಾಹಿತಿ ಹೊರಬರಲಿದೆ.
ಈ ಕುರಿತು ಉದ್ಯಮಿಯ ತಂದೆ ದಾಮೋದರ ರೈ ನೀಡಿದ ದೂರಿನ ಮೇರೆಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!