ಕಾರ್ಕಳ, ಎ.11: ಬೆಳ್ತಂಗಡಿ ಮೂಲದ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಸೌಮ್ಯ ಶೆಟ್ಟಿ (28) ಅವರನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ನೆಲ್ಯಾಡಿ ಮೂಲದ ಸುದೀಪ್ ರೈ ಹಾಗೂ ಕಾರ್ಕಳ ಕಜೆ ನಿವಾಸಿ, ಪುತ್ತೂರು ಉಪನೋಂದಣಿ ಕಚೇರಿ ಉದ್ಯೋಗಿ ಸೌಮ್ಯ ಶೆಟ್ಟಿ ಫೆ.17ರಂದು ನೋಂದಾಯಿತ ವಿವಾಹವಾಗಿದ್ದರು. ಬಳಿಕ ದಂಪತಿ ಕಾರ್ಕಳ ಜೋಡುರಸ್ತೆಯ ಬಂಗ್ಲೆಗುಡ್ಡೆ ಕಜೆ ಪ್ರದೇಶದಲ್ಲಿ ವಾಸವಾಗಿದ್ದರು.
ಮಾ.17ರಂದು ಸುದೀಪ್ ಅವರು ತಾಯಿಯೊಂದಿಗೆ ಪೂಜಾ ಕಾರ್ಯಕ್ರಮಕ್ಕಾಗಿ ಕಡಬ ತಾಲೂಕಿನ ನೆಲ್ಯಾಡಿ ಸಮೀಪ ತೆರಳುತ್ತಿದ್ದ ವೇಳೆ, ಸೌಮ್ಯ ಅವರು ಸ್ಕೂಟಿಯಲ್ಲಿ ಬಂದು ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದಾದ ಬಳಿಕ ಮಾ.22ರಂದು ಸುದೀಪ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮಾ.24ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಪತ್ನಿ ಮಾನಸಿಕ ಹಿಂಸೆ ನೀಡಿ ಆತ್ಮಹತ್ಯೆಗೆ ಪ್ರಚೋದಿಸಿದ್ದಾರೆಂದು ಮೃತರ ತಂದೆ ದಾಮೋದರ ರೈ ನೀಡಿದ ದೂರಿನ ಮೇರೆಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಅವರ ನಿರ್ದೇಶನದಂತೆ ತನಿಖೆ ಕೈಗೊಂಡ ಕಾರ್ಕಳ ನಗರ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕ ಮಂಜಪ್ಪ ಡಿ.ಆರ್. ನೇತೃತ್ವದ ತಂಡವು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಸೌಮ್ಯ ಶೆಟ್ಟಿಯನ್ನು ಎ.11ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.














