ಮಂಗಳೂರು: ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಒಂದು ಗಂಡು ಕರು ಹಾಗೂ ಮಾರುತಿ ಬ್ರೀಜಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಮೇ 14ರಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ PSI ಕೃಷ್ಣಪ್ಪ ಹಾಗೂ ಸಿಬ್ಬಂದಿ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ, ಬೆಳುವಾಯಿ ಕಡೆಯಿಂದ ಮಾರ್ನಾಡು ಅಳಿಯೂರು ಕಡೆಗೆ ಮಾರುತಿ ಬ್ರೀಜಾ ಕಾರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭಿಸಿತು. ಈ ಹಿನ್ನೆಲೆಯಲ್ಲಿ ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ಕ್ರಾಸ್ ಬಳಿ ವಾಹನ ತಪಾಸಣೆ ನಡೆಸಲಾಯಿತು.
ಈ ವೇಳೆ KA19MK4265 ಸಂಖ್ಯೆಯ ಬೂದು ಬಣ್ಣದ ಮಾರುತಿ ಬ್ರೀಜಾ ಕಾರು ಬಂದಿದ್ದು, ನಿಲ್ಲಿಸುವಂತೆ ಸೂಚಿಸಿದರೂ ಚಾಲಕ ವಾಹನವನ್ನು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ. ಪೊಲೀಸರು ವಾಹನವನ್ನು ಬೆನ್ನಟ್ಟಿದಾಗ, ಗುಂಡುಕಲ್ಲು 5 ಸೈಂಟ್ಸ್ ರಸ್ತೆಯಲ್ಲಿರುವ ಸಾಹುಲ್ ಹಮೀದ್ ಎಂಬುವರ ಮನೆಯ ಕಂಪೌಂಡ್ ಒಳಗೆ ಕಾರು ನಿಲ್ಲಿಸಿ, ಅದರಲ್ಲಿದ್ದ ಇಬ್ಬರು ಆರೋಪಿಗಳು ಓಡಿಹೋಗಲು ಯತ್ನಿಸಿದರು. ಬಳಿಕ ಪೊಲೀಸರು ಅವರನ್ನು ಬೆನ್ನಟ್ಟಿ ಹಿಡಿದರು.
ಬಂಧಿತರನ್ನು ಹಂಡೇಲಿನ ಮೊಹಮ್ಮದ್ ಆರಿಫ್ ಹಾಗೂ ಗಂಟಾಲಕಟ್ಟೆಯ ಇಮ್ರಾನ್ @ ಇಬ್ರಾಹಿಂ ಎಂದು ಗುರುತಿಸಲಾಗಿದೆ.
ಪರಿಶೀಲನೆ ವೇಳೆ ಕಾರಿನ ಹಿಂಭಾಗದ ಸೀಟ್ ತೆಗೆದು, ನೀಲಿ ಪ್ಲಾಸ್ಟಿಕ್ ಹಾಸಿ ಅದರ ಮೇಲೆ ಒಂದು ಗಂಡು ಕರುವಿನ ಕಾಲು ಮತ್ತು ತಲೆಯನ್ನು ಹಗ್ಗದಿಂದ ಕಟ್ಟಿ ಹಿಂಸಾತ್ಮಕವಾಗಿ ಸಾಗಾಟ ಮಾಡಲಾಗುತ್ತಿರುವುದು ಪತ್ತೆಯಾಯಿತು.
ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿಗಳು ವಿವಿಧ ಕಡೆಗಳಿಂದ ದನಗಳನ್ನು ಕಳ್ಳತನ ಮಾಡಿ, ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ಪ್ರದೇಶದಲ್ಲಿ ಮಾಂಸ ಮಾರಾಟ ಅಥವಾ ಇತರರಿಗೆ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಣೆ ಮಾಡಿರುವುದಾಗಿ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳ ವಿರುದ್ಧ ಈಗಾಗಲೇ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳ್ಳತನ, ಗೋಹತ್ಯೆ ತಡೆ ಕಾಯ್ದೆ, ಎನ್‌ಡಿಪಿಎಸ್ ಹಾಗೂ ಇತರ ಪ್ರಕರಣಗಳು ದಾಖಲಾಗಿವೆ. ಈ ಸಂಬಂಧ ಮೂಡಬಿದ್ರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.














