ಮಂಗಳೂರು: ಮಂಗಳೂರು-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಇನ್ನೊಂದು ತಿಂಗಳೊಳಗೆ ಆರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಶನಿವಾರ ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಅಮೃತ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಹೊಸ ರೈಲು ನಿಲ್ದಾಣ ನಿರ್ಮಾಣ ಮಾಡುವ ಕುರಿತು ಕಾರ್ಯಸಾಧ್ಯತಾ ಅಧ್ಯಯನ ನಡೆಯುತ್ತಿದೆ ಎಂದರು. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಪ್ರಸ್ತಾವನೆಯ ಮೇರೆಗೆ ಈ ಅಧ್ಯಯನ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.
ಮಂಗಳೂರು-ಬೆಂಗಳೂರು ವಂದೇ ಭಾರತ್ ರೈಲು ಕರಾವಳಿ ಭಾಗವನ್ನು ರಾಜ್ಯದ ಇತರ ಪ್ರದೇಶಗಳೊಂದಿಗೆ ವೇಗವಾಗಿ ಸಂಪರ್ಕಿಸುವಲ್ಲಿ ಸಹಕಾರಿಯಾಗಲಿದೆ. ಎಲ್ಲ ಪ್ರಮುಖ ನಿಲ್ದಾಣಗಳಲ್ಲಿ ನಿಲುಗಡೆಗೆ ಆದ್ಯತೆ ನೀಡಲಾಗುವುದು ಎಂದರು.
ಹಾಸನ-ಮಂಗಳೂರು ರೈಲು ಮಾರ್ಗದ ವಿದ್ಯುದೀಕರಣ ಪೂರ್ಣಗೊಂಡ ಬಳಿಕ ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಕ್ಷೇತ್ರಗಳ ಸಂಸದರು ವಂದೇ ಭಾರತ್ ರೈಲು ಸಂಚಾರಕ್ಕೆ ನಿರಂತರವಾಗಿ ಬೇಡಿಕೆ ಇಟ್ಟಿದ್ದರು ಎಂದು ಸಚಿವರು ತಿಳಿಸಿದರು.
ಮಂಗಳೂರು ಸೆಂಟ್ರಲ್-ಮುಂಬೈ ನಡುವೆ ಸಂಚರಿಸುವ ಮತ್ಸ್ಯಗಂಧ ಎಕ್ಸ್‌ಪ್ರೆಸ್‌ಗೆ ಮಂಗಳೂರು ಜಂಕ್ಷನ್‌ನಲ್ಲಿ ನಿಲುಗಡೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಅಭಿವೃದ್ಧಿ ಕಾಮಗಾರಿ ₹38 ಕೋಟಿ ವೆಚ್ಚದಲ್ಲಿ ನಡೆಯುತ್ತಿದ್ದು, ಈ ವರ್ಷದ ಅಕ್ಟೋಬರ್ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್ ಸಿದ್ಧವಾಗುತ್ತಿದೆ ಎಂದು ಹೇಳಿದರು.
ನಗರದ ಪಾಂಡೇಶ್ವರದಲ್ಲಿರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಬಳಿ ರಸ್ತೆಗಳನ್ನು ಆಗಾಗ ಬಂದ್ ಮಾಡುವುದರಿಂದ ಉಂಟಾಗುತ್ತಿರುವ ಸಂಚಾರ ಸಮಸ್ಯೆ ಕುರಿತು ಸಾರ್ವಜನಿಕರು ಸಚಿವರ ಗಮನ ಸೆಳೆದರು. ಈ ಸಂಬಂಧ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಸಚಿವರು, ಸಮಸ್ಯೆ ಪರಿಹಾರಕ್ಕೆ ಅಗತ್ಯ ಪ್ರಸ್ತಾವ ಸಲ್ಲಿಸುವಂತೆ ಸೂಚಿಸಿದರು.
ಇದಲ್ಲದೆ, ಶಿವಮೊಗ್ಗ-ಶೃಂಗೇರಿ-ಮಂಗಳೂರು ನಡುವಿನ 332 ಕಿ.ಮೀ ಉದ್ದದ ಹೊಸ ರೈಲು ಮಾರ್ಗಕ್ಕೆ ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದರು. ಹಾಸನ-ಮಂಗಳೂರು ಜೋಡಿಹಳಿ ಪ್ರಸ್ತಾವವೂ ಪರಿಶೀಲನೆ ಹಂತದಲ್ಲಿದೆ ಎಂದರು.
ರಾಜ್ಯದಲ್ಲಿ ಒಟ್ಟು ₹52 ಸಾವಿರ ಕೋಟಿ ಮೊತ್ತದ ರೈಲ್ವೆ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಇದರಲ್ಲಿ 14 ಹೊಸ ಯೋಜನೆಗಳು ಸೇರಿವೆ ಎಂದು ಸಚಿವ ವಿ. ಸೋಮಣ್ಣ ಹೇಳಿದರು.ಈ ಸಂದರ್ಭದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಪಾಲಘಾಟ್ ರೈಲ್ವೆ ಅಧಿಕಾರಿ ಮಧುಕರ ರಾವತ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.














