ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ 2026–27ನೇ ಶೈಕ್ಷಣಿಕ ವರ್ಷದ ಆರಂಭೋತ್ಸವ ‘ಫಿಲೋ ಆರಂಭ’ ಕಾರ್ಯಕ್ರಮ ಮೇ 25ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಯ ಸಂಚಾಲಕ ರೆ. ಫಾ. ಡಾ. ಜೋನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, “ಹತ್ತನೇ ತರಗತಿಯ ಬಳಿಕ ಕಾಲೇಜು ಶಿಕ್ಷಣಕ್ಕಾಗಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜನ್ನು ಆಯ್ಕೆ ಮಾಡಿಕೊಂಡಿರುವುದು ಉತ್ತಮ ನಿರ್ಧಾರ. ಇಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲಾ ಮೂಲಸೌಕರ್ಯಗಳು ಲಭ್ಯವಿದ್ದು, ಅನುಭವಿ ಪ್ರಾಧ್ಯಾಪಕರ ತಂಡವು ವಿದ್ಯಾರ್ಥಿಗಳ ಯಶಸ್ಸಿಗಾಗಿ ಶ್ರಮಿಸುತ್ತದೆ” ಎಂದರು.
“ಕಾಲೇಜು ಶಿಕ್ಷಣವು ಕೇವಲ ಪುಸ್ತಕದ ಜ್ಞಾನಕ್ಕೆ ಸೀಮಿತವಾಗಿರಬಾರದು. ವಿದ್ಯಾರ್ಥಿಗಳು ಸಾಂಸ್ಕೃತಿಕ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸಬೇಕು. ದೈಹಿಕ ಶಿಕ್ಷಣಕ್ಕೂ ಸಮಾನ ಪ್ರಾಧಾನ್ಯತೆ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿ ಜೀವನದಲ್ಲೂ ಯಶಸ್ಸು ಸಾಧಿಸಬೇಕು” ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕಾಲೇಜಿನ ವಾರ್ಷಿಕ ಸಂಚಿಕೆ ‘ಫಿಲೋ ದರ್ಶನ’ ಬಿಡುಗಡೆ ಮಾಡಲಾಯಿತು.
ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷೆ ದಿವ್ಯಾ ರೈ ಉಪಸ್ಥಿತರಿದ್ದರು. ಕಾಲೇಜಿನ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಉಪನ್ಯಾಸಕ ಹರ್ಷಿತ್ ಕುಮಾರ್ ಸ್ವಾಗತಿಸಿದರು. ಅವಿನಾ ಮಾಡ್ತಾ ವಂದಿಸಿದರು. ಸುಮಾ ಡಿ ಕಾರ್ಯಕ್ರಮ ನಿರೂಪಿಸಿದರು.













