ಬೆಂಗಳೂರು: ಆಫ್ರಿಕಾ ದೇಶಗಳಲ್ಲಿ ಎಬೋಲಾ ಸೋಂಕು ಹರಡುತ್ತಿರುವ ಹಿನ್ನೆಲೆ ಕರ್ನಾಟಕದಲ್ಲಿ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಜನರಿಗೆ ಭರವಸೆ ನೀಡಿದ್ದಾರೆ.
ರಾಜ್ಯದಲ್ಲಿ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪರಿಸ್ಥಿತಿಯನ್ನು ಆರೋಗ್ಯ ಇಲಾಖೆ ನಿಕಟವಾಗಿ ಗಮನಿಸುತ್ತಿದೆ ಎಂದು ಹೇಳಿದ್ದಾರೆ.
ಶನಿವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ಇದೂವರೆಗೆ ಯಾವುದೇ ಎಬೋಲಾ ಪ್ರಕರಣ ವರದಿಯಾಗಿಲ್ಲ. ರಾಜ್ಯ ಆರೋಗ್ಯ ಇಲಾಖೆ ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಬೆಳವಣಿಗೆಗಳ ಮೇಲೆ ಕಣ್ಣಿಟ್ಟಿದೆ ಎಂದು ತಿಳಿಸಿದ್ದಾರೆ.
ಉಗಾಂಡಾ ಮತ್ತು ಕಾಂಗೋ ಸೇರಿದಂತೆ ಎಬೋಲಾ ಸೋಂಕು ಕಾಣಿಸಿಕೊಂಡಿರುವ ಆಫ್ರಿಕಾ ದೇಶಗಳಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರನ್ನು 21 ದಿನಗಳ ಕಾಲ ನಿಗಾದಲ್ಲಿಡಲಾಗುತ್ತದೆ. ಯಾವುದೇ ಲಕ್ಷಣಗಳು ಕಂಡುಬಂದ ಕೂಡಲೇ ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.













