ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಆರೀಫ್ ಹುಸೈನ್ ಅಲಿಯಾಸ್ ‘ಟ್ಯಾಬ್ಲೆಟ್ ಆರೀಫ್’ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಮೊಹಮ್ಮದ್ ಇಬ್ರಾಹಿಂ ಸಿನಾನ್ @ ಚಿನ್ನು (21) ಎಂದು ಗುರುತಿಸಲಾಗಿದೆ. ಈತ ಬಜಾಲ್ ನಂತೂರು ನಿವಾಸಿಯಾಗಿದ್ದು, ಪ್ರಸ್ತುತ ಪಡೀಲ್ ವಿಜಯನಗರದಲ್ಲಿ ವಾಸವಾಗಿದ್ದಾನೆ.

ಮಾರ್ಚ್ 27ರಂದು ಬೆಳಗಿನ ಜಾವ ತೊಕ್ಕೊಟ್ಟು ಫ್ಲೈಓವರ್ ಮೇಲೆ ಬೈಕ್‌ನಲ್ಲಿ ತೆರಳುತ್ತಿದ್ದ ಆರೀಫ್ ಅವರನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಕೆಡವಿ, ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿದ್ದರು. ಬಳಿಕ ಕೃತ್ಯಕ್ಕೆ ಬಳಸಿದ್ದ ಕಾರನ್ನು ಬಂಟ್ವಾಳ ತಾಲೂಕಿನ ಬುಡೋಳಿ ಪ್ರದೇಶದಲ್ಲಿ ಬಿಟ್ಟು ಪರಾರಿಯಾಗಿದ್ದರು. ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಲಾಗಿತ್ತು.

ತನಿಖೆಯಲ್ಲಿ, ಫೆಬ್ರವರಿಯಲ್ಲಿ ಆರೀಫ್ ಹುಸೈನ್ ಅವರನ್ನು ಕೊಲೆ ಮಾಡಲು ರೂಪಿಸಿದ್ದ ಸಂಚಿನಲ್ಲಿ ಸಿನಾನ್ ಹಾಜರಿದ್ದ ಹಾಗೂ ಕೊಲೆ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳಿಗೆ ಹಣಕಾಸಿನ ನೆರವು ನೀಡಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈತ ಮೃತ ರೌಡಿಶೀಟರ್ ‘ಟೊಪ್ಪಿ ನೌಫಾಲ್’ನ ಸಹೋದರನಾಗಿದ್ದಾನೆ.

ಬಂಧಿತನ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಹಾಗೂ ಮಂಗಳೂರು ಉತ್ತರ ಠಾಣೆಯಲ್ಲಿ ಹಲ್ಲೆ ಪ್ರಕರಣ ಸೇರಿ ಎರಡು ಪ್ರಕರಣಗಳು ದಾಖಲಾಗಿವೆ.

ಈ ಪ್ರಕರಣದಲ್ಲಿ ಈಗಾಗಲೇ 11 ಮಂದಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಎಲ್ಲ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದು, ಅವರ ವಿರುದ್ಧ ‘ಕೋಕಾ ಕಾಯಿದೆ’ ಅಡಿಯಲ್ಲಿ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!