ಪುತ್ತೂರು: ವಿಜ್ಞಾನ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಸಾಧಿಸಲು ಶಿಸ್ತುಬದ್ಧ ಅಧ್ಯಯನ ಮತ್ತು ಕಠಿಣ ಪರಿಶ್ರಮ ಅತ್ಯಗತ್ಯ ಎಂದು ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್‌ನ ವಿದ್ಯಾರ್ಥಿ ಕ್ಷೇಮಪಾಲನಾ ಡೀನ್ ಡಾ. ಪ್ರಶಾಂತ ರಾವ್ ಹೇಳಿದರು.
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ಮಂಗಳವಾರ ಕಾಲೇಜು ಸಭಾಂಗಣದಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಕುರಿತು ಮಾಹಿತಿ ಕಾರ್ಯಾಗಾರದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಜೆಇಇ, ನೀಟ್ ಸೇರಿದಂತೆ ವಿವಿಧ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದ ಅವರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆಯ ಮಹತ್ವವನ್ನು ವಿವರಿಸಿದರು. 2028ರಲ್ಲಿ ಈ ಪರೀಕ್ಷೆಗಳನ್ನು ಎದುರಿಸಬೇಕಿರುವ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಮುಂದಿನ ಎರಡು ವರ್ಷಗಳಲ್ಲಿ ಯಾವ ರೀತಿಯಲ್ಲಿ ತಯಾರಿ ಮಾಡಿಕೊಳ್ಳಬೇಕು ಎಂಬುದರ ಕುರಿತು ಮಾರ್ಗದರ್ಶನ ನೀಡಿದರು.
ಉತ್ತಮ ವಿದ್ಯಾಭ್ಯಾಸದ ಜೊತೆಗೆ ವ್ಯಕ್ತಿತ್ವ ವಿಕಸನವೂ ಯಶಸ್ಸಿಗೆ ಅಗತ್ಯವಾಗಿದ್ದು, ಧನಾತ್ಮಕ ಚಿಂತನೆಯೊಂದಿಗೆ ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಸೂಕ್ತ ಮಾರ್ಗದರ್ಶನ ಅಗತ್ಯವಾಗಿದೆ ಎಂದರು. ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಸರಿಯಾದ ಮಾಹಿತಿ ವಿದ್ಯಾರ್ಥಿಗಳಿಗೆ ಲಭ್ಯವಾಗದೇ ಇರುವ ಹಿನ್ನೆಲೆ ಈ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ವೇದಿಕೆಯಲ್ಲಿ ಉಪನ್ಯಾಸಕ ರವಿಪ್ರಸಾದ್ ಬಿ.ಜಿ. ಉಪಸ್ಥಿತರಿದ್ದರು. ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ನಿರಂಜನ್ ಜಿ.ಯು., ಕವಿತಾ ಕೆ., ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಖಧೀಜತ್ ಅಸ್ನ ಸ್ವಾಗತಿಸಿದರು. ಜೋಸ್ವಿಟ ಅತಿಥಿಗಳನ್ನು ಪರಿಚಯಿಸಿದರು. ಶ್ಯಾನ್ ಅಬ್ಬಾಸ್ ವಂದಿಸಿದರು. ಸವಿಯ ಪ್ರೀಶಲ್ ಡಿ’ಸೋಜಾ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!