ಮಂಗಳೂರು, ಮೇ 27: ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳಕ್ಕೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮೇ 24ರಂದು ಬೆಳಗಿನ ಜಾವ ಸುಮಾರು 2.10ರ ವೇಳೆಗೆ ಕೋಡಿಕಲ್‌ನ ನಾರಾಯಣಗುರು ಸಮುದಾಯ ಭವನ ರಸ್ತೆಯ ಎದುರು ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರನ್ನು ಕೆಂಪು ಬಣ್ಣದ ಎಲೆಕ್ಟ್ರಿಕಲ್ ಸ್ಕೂಟರ್‌ನಲ್ಲಿ ಬಂದಿದ್ದ ಇಬ್ಬರು ಯುವಕರು ತಡೆದಿದ್ದಾರೆ. ಈ ವೇಳೆ ಸ್ಕೂಟರ್ ಹಿಂಭಾಗದಲ್ಲಿ ಕುಳಿತಿದ್ದ ವ್ಯಕ್ತಿ ಸಿಮೆಂಟ್ ಶೀಟ್ ತುಂಡಿನಿಂದ ಪೊಲೀಸ್ ಸಿಬ್ಬಂದಿಯ ತಲೆಗೆ ಹೊಡೆದು ಹಲ್ಲೆ ನಡೆಸಿದ್ದರಿಂದ ಗಾಯಗಳಾಗಿದ್ದವು. ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆ ಯತ್ನ ನಡೆಸಿದ ಆರೋಪದಡಿ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೊಂಡ ಸಿಸಿಬಿ ಪೊಲೀಸರು ಕೇರಳದ ಕಾಂಞಿಗಾಡ್ ಪ್ರದೇಶದಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ವಶಕ್ಕೆ ಪಡೆದು ಉರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸಚಿನ್ ಕೆ.ಆರ್ (24), ಅರಸಿನಮಕ್ಕಿ, ಕೊಕ್ಕಡ ನಿವಾಸಿ ಹಾಗೂ ಚಂದನ್ (24), ನೆಲ್ಯಾಡಿ ನಿವಾಸಿ ಎಂದು ಗುರುತಿಸಲಾಗಿದೆ.
ಆರೋಪಿಗಳು ಮಂಗಳೂರಿನ ಅಶೋಕನಗರದ ಫಲ್ಗುಣಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಸಚಿನ್ ಕುಂಟಿಕಾನದ ‘ಪೊನ್ ಪೊನ್ ಸ್ವೀಟ್ಸ್’ ಕಾರ್ಖಾನೆಯಲ್ಲಿ ಚಾಲಕನಾಗಿ ಮತ್ತು ಚಂದನ್ ಕೂಳೂರಿನ ಕಾರು ಶೋರೂಮ್‌ನಲ್ಲಿ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ನಗರದಲ್ಲಿ ಮಧ್ಯರಾತ್ರಿ ಸುತ್ತಾಡುತ್ತಿದ್ದ ಆರೋಪಿಗಳನ್ನು ಬೀಟ್ ಪೊಲೀಸರು ತಡೆದು ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡು ಹಲ್ಲೆ ನಡೆಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕೃತ್ಯಕ್ಕೆ ಬಳಸಿದ್ದ ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!