ಕಡಬ, ಮೇ 30: ಅಕ್ರಮವಾಗಿ ಗೋವಧೆ ನಡೆಸುತ್ತಿದ್ದ ಆರೋಪದಲ್ಲಿ ಬೆಳ್ಳಾರೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಮೇ 29ರಂದು ಸಂಜೆ ಅಕ್ರಮ ಗೋವಧೆ ನಡೆಯುತ್ತಿರುವ ಕುರಿತು ದೊರೆತ ಖಚಿತ ಮಾಹಿತಿಯ ಮೇರೆಗೆ ಬೆಳ್ಳಾರೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಸಂತೋಷ್ ಬಿ.ಪಿ. ನೇತೃತ್ವದ ತಂಡ ಕಡಬ ತಾಲೂಕಿನ ಸವಣೂರು ಗ್ರಾಮದ ಮಾಂತೂರು ಮುಂಡತಡ್ಕ ಪ್ರದೇಶಕ್ಕೆ ದಾಳಿ ನಡೆಸಿತು.
ತೋಟವೊಂದರಲ್ಲಿ ಜಾನುವಾರನ್ನು ವಧೆ ಮಾಡಿ ಮಾಂಸ ಮಾಡುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಬಂಧಿತರನ್ನು ಕೆ. ಅಬ್ದುಲ್ ರಫೀಕ್ (37), ಅದ್ರಾಮ ಮಂತೂರು (41) ಹಾಗೂ ಅಬ್ದುಲ್ ಖಾದರ್ ಪಣೆಮಜಲು (57) ಎಂದು ಗುರುತಿಸಲಾಗಿದೆ.
ವಿಚಾರಣೆಯಲ್ಲಿ ಯಾವುದೇ ಪರವಾನಗಿ ಪಡೆಯದೆ ಅಕ್ರಮವಾಗಿ ಗೋವಧೆ ನಡೆಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳದಲ್ಲಿದ್ದ ಜಾನುವಾರು ಮಾಂಸ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ, 2023ರ ಕಲಂ 4, 7 ಮತ್ತು 12ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.













