ಬೆಳ್ತಂಗಡಿ: ಹಲ್ಲೆಗೊಳಗಾದ ವ್ಯಕ್ತಿಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬಂಟ್ವಾಳದ ಪೆರ್ನೆ ನಿವಾಸಿ ನಿತಿನ್ (34) ಅವರು ನೀಡಿದ ದೂರಿನ ಪ್ರಕಾರ, ಜೂನ್ 1ರಂದು ಬೆಳಿಗ್ಗೆ ವಾಟ್ಸಾಪ್ ಮೂಲಕ ಗುರುವಾಯನಕೆರೆ ಸಮೀಪದ ಅಲಾದಿಕೊಟ್ಟಿಗೆಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾಗಿರುವ ಕುರಿತು ಭಾವಚಿತ್ರ ಸಹಿತ ಮಾಹಿತಿ ಬಂದಿತ್ತು. ಭಾವಚಿತ್ರವನ್ನು ಪರಿಶೀಲಿಸಿದ ವೇಳೆ ಮೃತ ವ್ಯಕ್ತಿ ತಮ್ಮ ಸಹೋದರ ಯತೀಶ್ (33) ಎಂದು ಗುರುತಿಸಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ನಂತರ ಘಟನಾ ಸ್ಥಳಕ್ಕೆ ತೆರಳಿದ ನಿತಿನ್ ಅವರು ಅಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಯತೀಶ್ ಅವರಿಗೆ ಬೆಳ್ತಂಗಡಿ ಮಿತ್ತಬಾಗಿಲು ನಿವಾಸಿ ಯಶೋಧರ (35), ಕಡಬ ಚಾರ್ವಾಕ ನಿವಾಸಿ ಮೋಹನ್ (30) ಹಾಗೂ ಬೆಳ್ತಂಗಡಿ ಪದಂಗಡಿ ನಿವಾಸಿ ಇಬ್ರಾಹಿಂ (54) ಹಲ್ಲೆ ನಡೆಸುತ್ತಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಆರೋಪಿಗಳ ಹಲ್ಲೆಯಿಂದ ಯತೀಶ್ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ನೀಡಲಾದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 65/2026ರಂತೆ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಕಲಂ 115(2), 103 ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.













