ಬಂಟ್ವಾಳ: ಧಾರ್ಮಿಕ ಕಾರ್ಯಕ್ರಮದ ವೇಳೆ ಉಂಟಾದ ಮಾತಿನ ಚಕಮಕಿಯು ಹತ್ಯೆಯಲ್ಲಿ ಅಂತ್ಯಗೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬಂಟ್ವಾಳದ ಪಿಲಾತಬೆಟ್ಟು ನಿವಾಸಿ ಶೇಖರ (43) ಅವರು ನೀಡಿದ ದೂರಿನ ಪ್ರಕಾರ, ಮೇ 31ರಂದು ರಾತ್ರಿ ಅವರ ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆದಿದ್ದು, ಕುಟುಂಬ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ವೇಳೆ ಶೇಖರ ಅವರ ಸಹೋದರ ಮಧುಸೂದನ್‌ (37) ಅವರು ತಮ್ಮ ಮತ್ತೋರ್ವ ಸಹೋದರನ ಮಗ ರಾಹುಲ್‌ಗೆ ಕೆಲಸದ ವಿಚಾರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ರಾಹುಲ್ ಅಲ್ಲಿಂದ ತೆರಳಿದ್ದಾನೆ.

ಕಾರ್ಯಕ್ರಮ ಮುಗಿದ ಬಳಿಕ ಮನೆಯ ಸಮೀಪ ಗದ್ದಲದ ಶಬ್ದ ಕೇಳಿ ಶೇಖರ ಅವರು ಸ್ಥಳಕ್ಕೆ ಧಾವಿಸಿದಾಗ, ರಾಹುಲ್ ಬಿಯರ್ ಬಾಟಲಿಯಿಂದ ಮಧುಸೂದನ್ ಅವರ ಕುತ್ತಿಗೆಗೆ ತಿವಿದಿರುವುದು ತಿಳಿದುಬಂದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಮಧುಸೂದನ್ ಅವರನ್ನು ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 58/2026ರಂತೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) 2023ರ ಕಲಂ 103 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ರಾಹುಲ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!