ಪುತ್ತೂರು, ಜೂ. 2: ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯಲ್ಲಿ 2026–27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸೋಮವಾರ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ. ಡಾ. ಜಾನ್ ಬಾಪ್ಟಿಸ್ಟ್ ಸಲ್ದಾನಾ ಮಾತನಾಡಿ, ವಿದ್ಯಾರ್ಥಿಗಳು ಗುರಿಯೊಂದಿಗೆ ಪರಿಶ್ರಮಪಟ್ಟು ವಿದ್ಯಾಭ್ಯಾಸ ಮಾಡಬೇಕು ಎಂದು ಕರೆ ನೀಡಿದರು. ಶಿಕ್ಷಕರು ವಿದ್ಯಾರ್ಥಿಗಳ ಮನೋಭಾವವನ್ನು ಅರ್ಥಮಾಡಿಕೊಂಡು ಅವರ ಸಾಮರ್ಥ್ಯಕ್ಕೆ ತಕ್ಕಂತೆ ಬೋಧನೆ ನೀಡಬೇಕೆಂದರು. ಮುಂಬರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಸಾಧಿಸಲು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಕಾರ್ಯಕ್ರಮವು ಸರ್ವಧರ್ಮ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ದೀಪ ಪ್ರಜ್ವಲನೆಯ ಮೂಲಕ ನೂತನ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ರೋಶನ್ ಲಸ್ರಾಡೊ ಹಾಗೂ ಶಾಲಾ ಉಪನಾಯಕಿ ಮರಿಯನ್ ವಿಜ್ ಡಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮುಖ್ಯಶಿಕ್ಷಕ ವಂ. ಮ್ಯಾಕ್ಸಿಮ್ ಡಿಸೋಜಾ ನೂತನ ಸಂಚಾಲಕರನ್ನು ಸ್ವಾಗತಿಸಿ ಪರಿಚಯಿಸಿದರು. ಶಿಕ್ಷಕ ಕ್ಲಮೆಂಟ್ ಪಿಂಟೋ ಅಭಿನಂದನಾ ಭಾಷಣ ಮಾಡಿದರು. ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ. ಡಾ. ಜಾನ್ ಬಾಪ್ಟಿಸ್ಟ್ ಸಲ್ದಾನಾ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಶಿಕ್ಷಕ ಪೀಟರ್ ನರೇಶ್ ಲೋಬೊ ವಂದಿಸಿದರು. ಶಿಕ್ಷಕಿ ಕಾರ್ಮಿನ್ ಪಾಯಸ್ ಕಾರ್ಯಕ್ರಮ ನಿರೂಪಿಸಿದರು.





